oppo_2 
ಜಿಲ್ಲೆ

ಕಾರ್ಯಕ್ರಮ ಅಚ್ಚುಕಟ್ಟಾಗಿ ರೂಪಿಸಿ

ಲಲಾಟಾಕ್ಷ ಎಸ್

ಹನೂರು: ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಯಾವುದೇ ಲೋಪವಾಗದಂತೆ ಯಶಸ್ವಿಗೊಳಿಸಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.


ತಾಲೂಕಿನ ಮಲೆಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಭಾನುವಾರ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಸಂಬಂಧ ಅಗತ್ಯ ಸಿದ್ಧತೆ ಕುರಿತು ಆಯೋಜಿಸಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆಯಲ್ಲಿ ಮಾತನಾಡಿದರು. ಮ.ಬೆಟ್ಟದ ಮಾದಪ್ಪನ ಸನ್ನಿಧಿಗೆ ಇತ್ತೀಚಿನ ವರ್ಷಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಈ ದಿಸೆಯಲ್ಲಿ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದರ ಮೂಲಕ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುತ್ತಿದೆ. 1989ರಿಂದಲೂ ಇಲ್ಲಿ ಉಚಿತ ಸಾಮೂಹಿಕ ವಿವಾಹ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.


ಇದೀಗ ಆ.21ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆದ್ದರಿಂದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ರೂಪಿಸಬೇಕು ಎಂದರು.
ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು, ವಿವಾಹ ಕಾರ್ಯಕ್ರಮದ ಬಗ್ಗೆ ಕೈಗೊಂಡಿರುವ ಸಿದ್ಧತೆ ಬಗ್ಗೆ ವಿವರಿಸಿದರು.

ಉಪ ಕಾರ್ಯದರ್ಶಿ ಚಂದ್ರಶೇಖರ್, ಇನ್‌ಸ್ಪೆಕ್ಟರ್ ಜಗದೀಶ್, ಪ್ರಾಧಿಕಾರದ ನೌಕರರಾದ ಮಹದೇವಸ್ವಾಮಿ, ಸ್ವಾಮಿ, ಜನಾರ್ದನ್, ಮಲ್ಲಿಕಾರ್ಜುನ, ಜಿ.ನಾಗರಾಜು, ಕೃಷ್ಣಮೂರ್ತಿ, ಇಂದ್ರೇಶ್, ಬೇಡಗಂಪಣ ಅರ್ಚಕರಾದ ಕೆ.ವಿ.ಮಾದೇಶ್, ಪುಟ್ಟಣ್ಣ ಇದ್ದರು.

ಇಂಜಿನಿಯರ್‌ಗೆ ತರಾಟೆ
ಇದೇ ವೇಳೆ ರಸ್ತೆ ಅಭಿವೃದ್ಧಿ ಹಾಗೂ ಇಲಾಖೆಯಿಂದ ಕೈಗೊಳ್ಳಬೇಕಿರುವ ಕಾಮಗಾರಿಯ ಬಗ್ಗೆ ಪಿಡಬ್ಲುೃಡಿ ಎಇಇ ಚಿನ್ನಣ್ಣ ಅವರನ್ನು ಶಾಸಕ ಎಂ.ಆರ್.ಮಂಜುನಾಥ್ ತರಾಟೆ ತೆಗೆದುಕೊಂಡರು.
ಮ.ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಆದರೆ, ತಾಳುಬೆಟ್ಟದಿಂದ ಮ.ಬೆಟ್ಟದವರೆಗೆ ರಸ್ತೆ ಹಾಳಾಗಿದೆ. ಇದರಿಂದ ಈ ಮಾರ್ಗವನ್ನು ಅಭಿವೃದ್ಧಿಪಡಿಸಬೇಖಿದೆ. ಈ ಬಗ್ಗೆ ಸರ್ವೇ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಆದರೆ, ನಿರ್ಲಕ್ಷ್ಯ ವಹಿಸಿರುವುದು ಎಷ್ಟರ ಮಟ್ಟಿಗೆ ಸರಿ? ರಸ್ತೆ ಹದಗೆಟ್ಟಿರುವುದರಿಂದ ಈ ಮಾರ್ಗದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ವಾಹನ ದಟ್ಟಣೆಯಿಂದ ಸಂಚಾರ ದಟ್ಟಣೆಯಾಗುತ್ತಿದೆ. ಇದರಿಂದ ಭಕ್ತರು ತೊಂದರೆಪಡುವಂತಾಗಿದೆ. ಆದ್ದರಿಂದ ಕೂಡಲೇ ಕ್ರಮವಹಿಸಿ ರಸ್ತೆ ಅಭಿವೃದ್ಧಿ ಸಂಬಂಧ ವರದಿ ಸಲ್ಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.