ಹನೂರು: ಸುಳವಾಡಿ ವಿಷ ಪ್ರಸಾದ ಸೇವನೆ ದುರಂತ ಪ್ರಕರಣದಿಂದ ಅನಾರೋಗ್ಯದಿಂದ ಬಳಲುತ್ತಿದ್ದ 17 ಸಂತ್ರಸ್ತರಿಗೆ ಶುಕ್ರವಾರ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ನೀಡಲಾಯಿತು.
ಪ್ರಸಾದ ಸೇವನೆ ಪ್ರಕರಣದಲ್ಲಿ 17 ಜನರು ಮೃತಪಟ್ಟು, 125ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಅವರಿಗೆ ಅಗತ್ಯ ಚಿಕಿತ್ಸೆಯನ್ನು ನೀಡಲಾಗಿತ್ತು. ಆದರೆ ಇವರಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಕೆಲವರು ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡಿರಲಿಲ್ಲ. ನಿಶ್ಯಕ್ತಿಯಿಂದ ಬಳಲುತ್ತಿದ್ದರು. ಕೆಲಸ ಕಾರ್ಯಗಳು ತೊಡಗಲು ಸಾಧ್ಯವಾಗುತ್ತಿರಲಿಲ್ಲ. ಈ ಬಗ್ಗೆ ಸಂತ್ರಸ್ತರು ಆ.1 ರಂದು ಶಾಸಕ ಎಂ.ಆರ್ ಮಂಜುನಾಥ್ ಅವರನ್ನು ಭೇಟಿಯಾಗಿ ಅಗತ್ಯ ಚಿಕಿತ್ಸೆ ಕೊಡಿಸುವಂತೆ ಮನವಿ ಮಾಡಿದ್ದರು. ಈ ವೇಳೆ ದಿನಾಂಕ ನಿಗದಿಪಡಿಸಿ ಅನಾರೋಗ್ಯದಿಂದ ಬಳಲುತ್ತಿರುವ ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್ ಅವರಿಗೆ ಸೂಚಿಸಿದ್ದರು.
ಹಾಗಾಗಿ 17 ಸಂತ್ರಸ್ತರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿ ಅಗತ್ಯ ಔಷಧವನ್ನು ವಿತರಿಸಲಾಯಿತು. ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಿದಂಬರಂ ಭೇಟಿ ನೀಡಿ ಸಂತ್ರಸ್ತರ ಆರೋಗ್ಯವನ್ನು ವಿಚಾರಿಸಿದರು. ಗುಣಮುಖ ಆಗುವವರೆಗೂ ಅಗತ್ಯ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಫೋಟೋ