ಮೇಲುಕೋಟೆ; ಶಿಕ್ಷಣ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಇಲ್ಲಿನ ಶತಮಾನದ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಎಸ್.ಎನ್.ಸಂತಾನರಾಮನ್ ಅವರನ್ನು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸನ್ಮಾನಿಸಿದರು.
ಪಾಂಡವಪುರದ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸೇವೆಯಲ್ಲಿದ್ದಾಗಲೇ ಅಕಾಲಿಕ ಮರಣಹೊಂದಿದ ಚಿನಕುರಳಿ ಕೆಪಿಎಸ್‌ಶಾಲೆಯ ಶಿಕ್ಷಕ ಚಿಕ್ಕಬಸಪ್ಪ ಇಲಾಖೆಗೆ ಸಲ್ಲಿಸಿದ ಸೇವೆ ಸ್ಮರಿಸಿ ಮೃತರ ಪತ್ನಿಗೆ ಗೌರವಾರ್ಪಣೆ ಮಾಡಲಾಯಿತು. ಜತೆಗೆ ತಾಲೂಕಿನಲ್ಲಿ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತದಾದ ಪ್ರಾಥಮಿಕ, ಪ್ರೌಢ, ಕಾಲೇಜು ಶಿಕ್ಷಕರನ್ನು ಅಭಿನಂದಿಸಲಾಯಿತು.
ಸಮಾರಂಭದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಧರ್ಮಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಾಶ್, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ರಂಗಸ್ವಾಮಿ, ಮೇಲುಕೋಟೆ ಸಿಆರ್‌ಪಿ ಬೆಟ್ಟಸ್ವಾಮಿಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.