ಜಿಲ್ಲೆ

ಮಂಡ್ಯದಲ್ಲಿ ಭಾವನಾತ್ಮಕ ಶ್ರದ್ಧಾಂಜಲಿ ಕಾರ್ಯಕ್ರಮ: ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಆಯೋಜನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ರಾಜ್ಯದ ಧೀಮಂತ ನಾಯಕರು, ಮುತ್ಸದ್ಧಿ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆಯ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲು ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆ ಮುಂದಾಗಿದೆ.

ಬೆಂಗಳೂರಿನ ಮಿನಿಸ್ಟರ್ ಕ್ವಾಟರ್ಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಮುಖಂಡರು, ಎಸ್.ಎಂ.ಕೃಷ್ಣ ಅವರ ಅಭಿಮಾನಿಗಳ ಜತೆಗಿನ ಶ್ರದ್ಧಾಂಜಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. ಎಸ್.ಎಂ.ಕೃಷ್ಣ ಅವರಿಗೆ ಭಾವನಮನ, ಗೀತ ನಮನ, ಚಿತ್ರನಮನ, ಪುಷ್ಪ ನಮನ ಹಾಗೂ ದೀಪ ನಮನ ಒಳಗೊಂಡಂತೆ ಐದು ರೂಪದಲ್ಲಿ ನಮನ ಸಲ್ಲಿಸಲು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಶಾಸಕ ರವಿಕುಮಾರ್ ಗಣಿಗ, ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಮಾಜಿ ಸಂಸದ ಶಿವರಾಮೇಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಮರಿತಿಬ್ಬೇಗೌಡ, ಹಿರಿಯ ಐಪಿಎಸ್ ಅಧಿಕಾರಿ ರವಿಕಾಂತೇಗೌಡ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಕರ್ನಾಟಕ ಸಂಘದ ಅಧ್ಯಕ್ಷ ಪೊ.ಬಿ.ಜಯಪ್ರಕಾಶಗೌಡ, ಸತ್ಯಾನಂದ, ರಾಮು, ಅಮರನಾಥಗೌಡ, ಎನ್.ಎಸ್.ರಮೇಶ್ ಇತರರಿದ್ದರು.

ಡಿಸಿಎಂ ಜತೆ ಚರ್ಚಿಸಿ ದಿನಾಂಕ ನಿಗದಿ

ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸುವ ಕುರಿತು ಜಿಲ್ಲೆಯ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಲಾಯಿತು. ವೇದಿಕೆಯ ಈ ಕಾರ್ಯಕ್ರಮಕ್ಕೆ ಸಂಚಾಲಕರನ್ನಾಗಿ ಎಂಎಲ್‌ಸಿ ದಿನೇಶ್ ಗೂಳಿಗೌಡ ಅವರನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮದ ದಿನಾಂಕ, ಸಿದ್ಧತೆ ಮತ್ತು ರೂಪುರೇಷೆಗಳನ್ನು ವಿದೇಶ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿಗೆ ವಾಪಸ್ ಆದ ನಂತರ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.