ಜಿಲ್ಲೆ

ಸಂಪೂರ್ಣ ಸಾಕ್ಷರತೆ ಸಾಧಿಸಲು ಪ್ರಯತ್ನಿಸಿ: ಡಾ.ಬಿ.ಸಿ.ಸತೀಶ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣ ಶೇ.೮೨ ರಷ್ಟು ಇದ್ದು, ಸಂಪೂರ್ಣ ಸಾಕ್ಷರತೆ ಹೊಂದುವಂತಾಗಲು ಪ್ರಯತ್ನಗಳು ನಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಲೋಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಾಕ್ಷರತಾ ಸಪ್ತಾಹ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿರವರು ಮಾತನಾಡಿದರು.


ಪ್ರತಿಯೊಬ್ಬರೂ ಓದು ಮತ್ತು ಬರೆಯುವುದನ್ನು ಕಲಿಯಬೇಕು. ಕೊಡಗು ಜಿಲ್ಲೆಯನ್ನು ಶೇ.೧೦೦ ರಷ್ಟು ಸಾಕ್ಷರತಾ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರೂ ಕೈಜೋಡಿಸುವಂತಾಗಬೇಕು. ’ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಡಿಜಿಟಲೀಕರಣದ ಬಳಕೆಯಲ್ಲಿ ಹಿಂದೆ ಇರುತ್ತಾರೆ. ಆದ್ದರಿಂದ ಕಲಿಕೆ ನಿರಂತರವಾಗಿರುತ್ತದೆ. ಅಪ್‌ಡೇಟ್ ಮಾಹಿತಿಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸಬೇಕು ಎಂದರು.


ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಮಾತನಾಡಿ, ಕೊಡಗು ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಒಂದು ಹೆಜ್ಜೆ ಮುಂದೆ ಇದೆ. ಆದರೆ ಹಾಡಿಗಳಲ್ಲಿ ಇನ್ನೂ ಸಹ ಸಾಕ್ಷರತೆ ಪ್ರಮಾಣ ಹೆಚ್ಚಿಸಬೇಕು. ಜಿಲ್ಲೆಯಲ್ಲಿ ಇನ್ನೂ ೪೫ ಸಾವಿರ ಜನರು ಸಾಕ್ಷರತೆ ಪಡೆಯಬೇಕಿದೆ. ಆ ನಿಟ್ಟಿನಲ್ಲಿ ಹೊಸ ಸರ್ವೇ ಮಾಡಲಾಗುತ್ತಿದೆ ಎಂದರು.


ಕಲಿಕೆಗೆ ವಯಸ್ಸು ಮುಖ್ಯ ಅಲ್ಲ. ಮೂಲ ಅಕ್ಷರ ಕಲಿಕೆಗೆ ಒತ್ತು ನೀಡಬೇಕು. ಎಲ್ಲರೂ ಎಲ್ಲರಿಗಾಗಿ ಕಲಿಸಬೇಕು. ಇದರಿಂದ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸಬಹುದು. ಗ್ರಾ.ಪಂ.ಮಟ್ಟದಲ್ಲಿ ಕಲಿಕಾ ಕೇಂದ್ರಗಳನ್ನು ಆರಂಭಿಸಿ ಹೆಚ್ಚಿನ ಸಾಕ್ಷರತೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಸಾಕ್ಷರತಾ ಅಧಿಕಾರಿ ಎಂ.ಕೃಷ್ಣಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ, ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು, ಯೋಜನಾ ನಿರ್ದೇಶಕ ಜಗದೀಶ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್.ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಜಿಲ್ಲಾ ಉಪ ಸಮನ್ವಯಾಧಿಕಾರಿ ಶೋಭ, ಶಿಕ್ಷಣಾಧಿಕಾರಿ ದೊಡ್ಡೇಗೌಡ, ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಆಯುಕ್ತರಾದ ಜಿಮ್ಮಿ ಸಿಕ್ವೇರಾ, ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್ ಕಾರ್ಯಕ್ರಮ ಸಹಾಯಕ ಸಿ.ಕೆ.ರಾಜೇಶ್ವರಿ ಇತರರು ಇದ್ದರು.