ತುಮಕೂರು: ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರೇ ನೇರ ಹೊಣೆಯಾಗಲಿದ್ದು ವೇತನ ಬಡ್ತಿ ಕಡಿತಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ನೀಡಿರುವ ಹೇಳಿಕೆ ಶಿಕ್ಷಕರ ವಲಯದ ಆಕ್ರೋಶಕ್ಕೆ ಕಾರಣವಾಗಿದೆ.
ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿರುವುದು ಮನವರಿಕೆಯಾಗಿದೆ. ಮಕ್ಕಳು ಕನ್ನಡ ಅಕ್ಷರಗಳನ್ನೇ ಗುರುತಿಸಲು ಕಷ್ಟಪಡುತ್ತಿದ್ದಾರೆ ಎಂದು ಶಿಕ್ಷಕರ ವಿರದ್ಧ ಹರಿಹಾಯ್ದರು.
ಮಕ್ಕಳ ಕಲಿಕೆ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು ಅಧಿಕಾರಿಗಳು, ಶಿಕ್ಷಕರು ಮೌಲ್ಯಯುತ ಶಿಕ್ಷಣ ನೀಡಬೇಕು. ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಅವರ ವೇತನ, ಬಡ್ತಿಯನ್ನು ಕಡಿತಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಾರದಲ್ಲಿ 5 ದಿನ ಶಾಲೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಮಕ್ಕಳ ಹಾಜರಾತಿ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು, ಎಸ್ಎಸ್ಎಲ್ಸಿ ಲಿತಾಂಶದಲ್ಲಿ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಿಂದ ಉತ್ತಮ ಸಾಧನೆಯನ್ನು ನಿರೀಸುತ್ತಿದ್ದೇವೆ ಎಂದರು.