ತುಮಕೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ, ಆಯಾ ಜಿಲ್ಲೆಗಳ ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ಲೈನ್ನಲ್ಲಿ ಶೇ.50ರ ರಿಯಾಯಿತಿ ದರದಲ್ಲಿ ಪುಸ್ತಕಗಳು ಲಭ್ಯವಿರುತ್ತವೆ.
ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರ, ನಾಟಕ, ಅಲೆಮಾರಿ ಸಮುದಾಯ, ವೈದ್ಯಕಿಯ, ಪ್ರಾಚಿನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 700ಕ್ಕೂ ಹೆಚ್ಚಿನ ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.
ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶದಿಂದ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಈ ರಿಯಾಯತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.