ತುಮಕೂರು: ಭಾರತ ಸ್ವಾಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಆ.15ರ ವರೆಗೆ "ಹರ್ ಘರ್ ತಿರಂಗಾ' ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದ್ದಾರೆ.
ಅಭಿಯಾನದ ಅಂಗವಾಗಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಪಾಲಿಕೆ ವತಿಯಿಂದ ನಗರದ ಆಯ್ದ ಸ್ಥಳಗಳಲ್ಲಿ ಸೆಲ್ಫಿ ಪಾಯಿಂಟ್ಗಳನ್ನು ನಿರ್ಮಿಸಲಾಗುವುದು. ಸಾರ್ವಜನಿಕರು ತಮ್ಮ ಮನೆಗಳ ಮೇಲ್ಭಾಗದಲ್ಲಿ ರಾಷ್ಟ್ರ ಧ್ವಜ ಹಾರಿಸಿ, ತಿರಂಗಾ ಸೆಲ್ಫಿಗಳನ್ನು ತೆಗೆದು harghartiranga.com ನಲ್ಲಿ ಅಪ್ಲೋಡ್ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಜಿಲ್ಲಾದ್ಯಂತ ಲಭ್ಯವಿರುವ ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಿ ಗೌರವಿಸಲಾಗುವುದು. ಸ್ವಾತಂತ್ರ್ಯೊತ್ಸವ ಹಿನ್ನೆಲೆಯುಳ್ಳ ಸ್ಥಳ, ಕಟ್ಟಡ, ಶಿಲಾ ಫಲಕಗಳನ್ನು ಗುರುತಿಸಿ ತಳಿರು ತೋರಣ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗುವುದು.
ತುಮಕೂರು ವಿವಿಸಹಯೋಗದಲ್ಲಿ ಮ್ಯಾರಥಾನ್ ಓಟದ ಸ್ಪರ್ಧೆಯನ್ನು ಆಯೋಜಿಸಲಾಗುವುದು. ಸ್ವಾತಂತ್ರ್ಯೊತ್ಸವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲಾ, -ಕಾಲೇಜುಗಳ ಹಂತದಲ್ಲಿ ಜಾಥಾ ಕಾರ್ಯಕ್ರಮ ಆಯೋಜಿಸಲಾಗುವುದು. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಸ್ಥಳಿಯ ಮಹಿಳಾ ಸಂಘ ಸಂಸ್ಥೆಗಳು, ಎಲ್ಲಾ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಆಗಸ್ಟ್ 13 ರಿಂದ 15ರ ವರೆಗೆ ತಮ್ಮ ಮನೆಗಳ ಮೇಲೆ ರಾಷ್ಟ್ರ ಬಾವುಟಗಳನ್ನು ಹಾರಿಸಿ, ತಿರಂಗಾ ಸೆಲ್ಫಿಗಳನ್ನು ತೆಗೆದು harghartiranga.com ನಲ್ಲಿ ಅಪ್ಲೋಡ್ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಅಭಿಯಾನದ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಶುಭಕಲ್ಯಾಣ್ ಮನವಿ ಮಾಡಿದ್ದಾರೆ.