ತುಮಕೂರು: ಜಿಲ್ಲೆಯಲ್ಲಿ ಪೂರ್ವಮುಂಗಾರು ಮಳೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಾರಂಭಿಸಿದೆ. ಜಿಲ್ಲೆಯೆಲ್ಲೆಡೆಗಳಿಂದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿಪಂ ಸಿಇಒ ಜಿ.ಪ್ರಭು ಅಧಿಕಾರಿಗಳ ಜತೆ ಸಭೆ ನಡೆಸಿ ಕೆಲವು ಸೂಚನೆಗಳನ್ನು ನೀಡಿದರು.
ಗುರುವಾರ ಜಿಪಂ ಸಭಾಂಗಣದಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿಯ ಸಭೆ ನಡೆಸಿ ಜಿ.ಪ್ರಭು, ಬೇಸಿಗೆಯಿಂದ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ತಲೆದೋರಿರುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಯೋಜನೆಗಳನ್ನು ರೂಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಜಲ್ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರನ್ನು ಒದಗಿಸುವ ಪೈಪ್ಲೈನ್ ಅಳವಡಿಕೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 3 ವಾಟರ್ ಟೆಸ್ಟಿಂಗ್ ಲ್ಯಾಬ್ಗಳಿಂದ ಈವರೆಗೆ ಯಾವುದೇ ನೀರು ಪರೀಕ್ಷಾ ವರದಿಗಳು ಸಲ್ಲಿಕೆಯಾಗಿಲ್ಲ ಎಂಬ ಮಾಹಿತಿಗೆ ಅಸಮಾಧಾನ ವ್ಯಕ್ತಪಡಿಸಿದರು.
ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಹೊಣೆಗಾರಿಕೆ ನಮ್ಮದು, ಈ ನಿಟ್ಟಿನಲ್ಲಿ ನೀರಿನ ಜೈವಿಕ ಹಾಗೂ ರಾಸಾಯನಿಕ ಪರೀಕ್ಷೆ ನಡೆಸಿ ಪ್ರತಿ 15 ದಿನಗಳಿಗೊಮ್ಮೆ ವರದಿ ಸಲ್ಲಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಅವಶ್ಯಕತೆ ಇರುವ ಕಡೆ ಅಂಗನವಾಡಿ ಕೇಂದ್ರಗಳ ನಿಮಾರ್ಣಕ್ಕೆ ಸ್ಥಳ ಗುರುತಿಸಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಜಿಲ್ಲಾ ಪಂಚಾಯತಿಯಿಂದಲೇ ಅನುಮೋದನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ(ಅಭಿವೃದ್ಧಿ) ಸಂಜೀವಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಇದ್ದರು.