ತುಮಕೂರು: ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅ.18, 19 ಹಾಗೂ 20ರಂದು 3 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಉಪ ಲೋಕಾಯುಕ್ತರು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಅ.18ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕ ಕುಂದು ಕೊರತೆಗಳ ವಿಚಾರಣೆ, ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ ಹಾಗೂ ನಂತರ 5.30 ರಿಂದ 6.30 ಗಂಟೆಯವರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಲೋಕಾಯುಕ್ತ ಕಾಯ್ದೆಗೆ ಸಂಬಂಧಿಸಿದಂತೆ ಏರ್ಪಡಿಸಿರುವ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ 19ರಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬೆಳಗ್ಗೆ 9.45 ರಿಂದ 10.45ರ ವರೆಗೆ ಜಿಲ್ಲೆಯ ವಕೀಲರೊಂದಿಗೆ ಸಂವಾದ ಸಭೆ, ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಹಾಗೂ ಮ.2.30 ರಿಂದ ಸಂಜೆ 5 ಗಂಟೆಯವರೆಗೆ, ಅಕ್ಟೋಬರ್ 18ರಂದು ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿ/ ಕುಂದು ಕೊರತೆಗಳ ವಿಲೇವಾರಿ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ. ನಂತರ ಲೋಕಾಯುಕ್ತ ಕಚೇರಿಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಬಾಕಿ ಇರುವ ದೂರು ಪ್ರಕರಣಗಳ ಕುರಿತು ವಿಚಾರಣೆ ನಡೆಸಲಿದ್ದಾರೆ.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅ.20ರಂದು ಬೆಳಗ್ಗೆ 9 ರಿಂದ 11ರ ವರೆಗೆ ಜಿಲ್ಲೆಯ ನ್ಯಾಯಾಂಗ ಅಧಿಕಾರಿ ಹಾಗೂ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಉಪ ಲೋಕಾಯುಕ್ತರು ನಡೆಸಲಿರುವ ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು.