ಜಿಲ್ಲೆ

ಆಗ್ನೇಯ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು: ಮುಂದಿನ ಜೂನ್‌ಗೆ ತೆರವಾಗಲಿರುವ ವಿಧಾನಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕರಡು ಮತದಾರರ ಪಟ್ಟಿ ನ.23ರಂದು ಪ್ರಕಟಿಸಲಾಗಿದ್ದು ಆಕ್ಷೇಪಣೆಗಳಿಗೆ ಆಹ್ವಾನ ನೀಡಲಾಗಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಕರಡುಪಟ್ಟಿ ತಯಾರಿಸಲಾಗಿದ್ದು ಈ ಬಗ್ಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸಬಹುದು ಎಂದರು.

ಪ್ರಸ್ತುತ ಘೋಷಿಸಿರುವ ಕರಡು ಮತದಾರರ ಪಟ್ಟಿಯಲ್ಲಿ ಜಿಲ್ಲೆಯಲ್ಲಿ 6061 ಅರ್ಹ ಶಿಕ್ಷಕ ಮತದಾರರು ಸೇರ್ಪಡೆಯಾಗಿದ್ದಾರೆ. 2018ರ ಚುನಾವಣೆಯಲ್ಲಿ 6818 ಮತದಾರರು ಇದ್ದರು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಇದ್ದರು.

ಆಕ್ಷೇಪಣೆ ಸಲ್ಲಿಸಲು ಡಿ.9ರ ವರೆಗೂ ಅವಕಾಶ:

3827 ಪುರುಷ, 2234 ಮಹಿಳಾ ಮತದಾರರು ಸೇರಿಸಿ ಒಟ್ಟು 6061 ಶಿಕ್ಷಕರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.ಮತದಾರರ ಪಟ್ಟಿಗೆ ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಡಿಸೆಂಬರ್ 9ರ ವರೆಗೂ ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ, ತುಮಕೂರು ಆಯುಕ್ತರು, ತುಮಕೂರು ಮಹಾನಗರಪಾಲಿಕೆ, ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲ್ಲೂಕು ತಹಶೀಲ್ದಾರವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.