ತುಮಕೂರು: ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ದೆಹಲಿಗೆ ಆಗಮಿಸುವ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು ವಾಸ್ತವ್ಯ ಹೂಡಲು ಅನುಕೂಲವಾಗುವಂತೆ ಹಾಸ್ಟೆಲ್ ನಿರ್ಮಾಣ ಮಾಡಬೇಕು ಎಂದು ಸಂಸದ ಜಿ.ಎಸ್.ಬಸವರಾಜು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಇತ್ತೀಚೆಗೆ ಮನವಿ ಸಲ್ಲಿಸಿರುವ ಬಸವರಾಜು, ದೆಹಲಿಗೆ ವಿವಿಧ ಸ್ಪರ್ಧಾತ್ಮ ಪರೀಕ್ಷೆಗಳನ್ನು ಬರೆಯಲು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಅವರು ಉಳಿದುಕೊಳ್ಳಲು ಸಮರ್ಪಕ ವ್ಯವಸ್ಥೆ ಇಲ್ಲದ ಕಾರಣ ಸಮಸ್ಯೆ ಅನುಭವಿಸುವಂತಾಗಿದೆ ಎಂದು ಮನವರಿಕೆ ಮಾಡಿದ್ದಾರೆ.
ದೆಹಲಿಯಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಕರ್ನಾಟಕದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸುವ ಮೂಲಕ ನಾವು ಅವರ ಉಜ್ವಲ ವೃತ್ತಿ ಜೀವನವನ್ನು ನಿರ್ಮಿಸಲು ಮತ್ತು ನಮ್ಮ ರಾಜ್ಯಕ್ಕೆ ಆಸ್ತಿಯಾಗಲು ಅನುವು ಮಾಡಿಕೊಡಬೇಕಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ಗುತ್ತಿಗೆ ಅಥವಾ ಬಾಡಿಗೆ ಆಧಾರದ ಮೇಲೆ ಕರ್ನಾಟಕದ ಭೂಮಿ ಅಥವಾ ಪಾರ್ಸೆಲ್ ಭೂಮಿಯನ್ನು ಪಡೆಯುವ ಮೂಲಕ ಹಾಸ್ಟೆಲ್ ನಿರ್ಮಿಸಬಹುದಾಗಿದೆ ಎಂದು ಸಲಹೆ ನೀಡಿದ್ದಾರೆ.