ಜಿಲ್ಲೆ

ರಾಷ್ಟ್ರೀಯ ಹೆದ್ದಾರಿ ಪ್ರಗತಿ ಪರಿಶೀಲನಾ ಸಭೆ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಆಮೆ ವೇಗದಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಜನಾಕ್ರೋಶ ವ್ಯಕ್ತವಾಗಿದ್ದು ಜಿಲ್ಲಾಡಳಿತ ಎಚ್ಚೆತ್ತುಕೊಂಡು ಅಧಿಕಾರಿಗಳ ಸಭೆ ನಡೆಸಿದೆ.

ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಡಾ.ಜಿ.ಪರಮೇಶರ ಬುಧವಾರ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ತುಮಕೂರು&ಬೆಂಗಳೂರು ನಡುವೆ ಸಂಚಾರಕ್ಕೆ ನೆಲಮಂಗಲದಿಂದ ರಸ್ತೆ ಕಾಮಗಾರಿ ವಿಳಂಬವಾಗುತ್ತಿರುವುದು ತೊಂದರೆ ತಂದೊಡ್ಡಿದೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ ಎಂದರು.

ನೆಲಮಂಗಲದಿಂದ ತುಮಕೂರು ಬೈಪಾಸ್​ ರಸ್ತೆವರೆಗೂ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ-48ರಲ್ಲಿ 45ಕಿಮೀ ಕಾಮಗಾರಿಯನ್ನು 2026ರ ಮಾರ್ಚ್​ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕ ಅನೂಪ್​ಶಮಾರ್ಗೆ ಸೂಚಿಸಿದರು.

ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ ಸುಮಾರು 19 ಕಿಲೋ ಮೀಟರ್​ ಉದ್ದದ ರಾಷ್ಟ್ರೀಯ ಹೆದ್ದಾರಿಯು 16 ಹಳ್ಳಿಗಳ ಮೂಲಕ ಹಾದು ಹೋಗಲಿದೆ. ಸ್ಥಳಿಯರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಕಾಮಗಾರಿ ಕೈಗೊಳ್ಳಬೇಕು ಎಂದು ತಿಳಿಸಿದರು.

ನಗರದ ಬೆಳಗುಂಬ, ಶ್ರೀದೇವಿ ಕಾಲೇಜು, ಯಲ್ಲಾಪುರ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿರುವ ರಸ್ತೆ ಕೆಳ ಸೇತುವೆಗಳಲ್ಲಿ ಬೆಳಕಿನ ವ್ಯವಸ್ಥೆ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಅಪಘಾತಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ವ್ಯಾಪ್ತಿಯಲ್ಲಿ 40 ಬ್ಲಾಕ್​ಸ್ಪಾಟ್​ಗಳನ್ನು ಗುರುತಿಸಿದ್ದು, ಈ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ಪೇಂಟಿಂಗ್​ ಹಾಗೂ ಸುರಕ್ಷತಾ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು. ಅಪಘಾತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಶಾಸಕ ಎಚ್​.ವಿ ವೆಂಕಟೇಶ್​, ಜಿಲ್ಲಾಧಿಕಾರಿ ಶುಭಕಲ್ಯಾಣ್​, ಜಿಲ್ಲಾ ಪೊಲೀಸ್​ ಅಧೀಕ್ಷಕ ಕೆ.ವಿ.ಅಶೋಕ್​, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಆಶ್ವಿಜ, ವಿಶೇಷ ಭೂಸ್ವಾಧಿನಾಧಿಕಾರಿ ಅಪೇಕ್ಷ ಮತ್ತಿತರರು ಇದ್ದರು.