People are fed up with Congress misrule.
ತಿಪಟೂರು: ರಾಜ್ಯದಲ್ಲಿ 2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೇ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಚ್.ನಿಂಗಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ನಿಂತುಹೋಗಿದೆ ಎಂದು ಆರೋಪಿಸಿದರು.
ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ಮಾತನಾಡಿ, ಕಳೆದ 10 ವರ್ಷಗಳಿಂದಲೂ ತಿಪಟೂರಿನಲ್ಲಿ ಜನರ ಸೇವೆ ಮಾಡುತ್ತಾ ಬಂದಿದ್ದೇನೆ. ಬರಗಾಲದಲ್ಲಿ ಜನರಿಗೆ ಉಚಿತವಾಗಿ ಟ್ಯಾಂಕರ್ ನೀರು ಕೊಟ್ಟಿದ್ದೇನೆ. ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಹೋರಾಟ ಮಾಡಿದ್ದೇನೆ. ನನ್ನ ಜನಸೇವೆ, ಹೋರಾಟ ಮೆಚ್ಚಿ ಜನತೆ ಆಶೀರ್ವಾದ ಮಾಡಿದರೆ ತಾಲೂಕಿನ ಜನರಿಗೆ 24 ಗಂಟೆ ಸೇವೆ ನೀಡಲು ಬದ್ಧನಾಗಿದ್ದೇನೆ ಎಂದರು.