ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಜಿಪಂ ಸಿಇಒ ಬಿ.ವಿ.ಅಶ್ವಿಜ ವಿದ್ಯಾರ್ಥಿ ನಿಲಯಗಳ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
- ಒಬಿಸಿ, ಸಮಾಜ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ
- ವಾರ್ಡನ್, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ
- ಜಿಪಂ ಸಿಇಒ ಅಶ್ವಿಜ ಖಡಕ್ ಸೂಚನೆ
ತುಮಕೂರು: ಜಿಲ್ಲೆಯ ಸರ್ಕಾರಿ ಹಾಸ್ಟೆಲ್ಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಮಕ್ಕಳ ನಿರ್ವಹಣೆಯಲ್ಲಿ ಲೋಪ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಪಂ ಸಿಇಒ ಬಿ.ವಿ.ಅಶ್ವಿಜ ಖಡಕ್ ಎಚ್ಚರಿಕೆ ಕೊಟ್ಟರು.
ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ವಿದ್ಯಾರ್ಥಿನಿಲಯಗಳಿಗು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು ಈ ವೇಳೆ ಹಾಸ್ಟೆಲ್ಗಳಲ್ಲಿ ಮೂಲಸೌಕರ್ಯಗಳಿಲ್ಲದೆ ಸಮಸ್ಯೆಗಳ ಬಗ್ಗೆ ದೂರು ಕೇಳಿ ಬಂದಿದ್ದೇ ಆದಲ್ಲಿ, ಸಂಬಂಧಪಟ್ಟವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದರು.
ಕರ್ತವ್ಯ ಆ್ಯಪ್ ಕಡ್ಡಾಯ: ಪ್ರತಿನಿತ್ಯ ವಿದ್ಯಾರ್ಥಿ ನಿಲಯದ ವಾರ್ಡ್ನಗಳು "ಕರ್ತವ್ಯ ಆಪ್' ಬಳಸಿ ತಮ್ಮ ಹಾಜರಾತಿಯನ್ನು ಕಡ್ಡಾಯವಾಗಿ ಹಾಕಬೇಕು. ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿ ವಾಸವಿದ್ದು ಅದರ ದೃಢೀಕರಣವನ್ನು ಇಲಾಖೆಗೆ ಸಲ್ಲಿಸಬೇಕು. ನಿಲಯ ಪಾಲಕರು ಶನಿವಾರ ಮತ್ತು ಭಾನುವಾರ ಹಾಸ್ಟೆಲ್ಗಳಿಗೆ ಭೇಟಿ ನೀಡುತ್ತಿಲ್ಲ ಎಂಬ ದೂರುಗಳಿದ್ದು ಈ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಶ್ವಿಜ ಎಚ್ಚರಿಸಿದರು.
ವಿದ್ಯಾರ್ಥಿ ನಿಲಯಗಳ ಮೂಲಭೂತ ಸೌಕರ್ಯಗಳಾದ ಹಾಸಿಗೆ, ಹೊದಿಕೆ, ದಿಂಬು, ವಾಟರ್ ಹೀಟರ್, ಕುಡಿಯುವ ನೀರು, ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ವಿದ್ಯಾರ್ಥಿ ನಿಲಯಗಳ ನಿಲಯ ಪಾಲಕರು ಚರಂಡಿ, ಕುಡಿಯುವ ನೀರು, ಸೋಲಾರ್, ವಾಟರ್ ಹೀಟರ್ ಸೇರಿದಂತೆ ಮೂಲಭೂತ ಅಗತ್ಯತೆಯ ಬಗ್ಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬೇಡಿಕೆ ಸಲ್ಲಿಸಿದ್ದು ಶೀಘ್ರದಲ್ಲೇ ವ್ಯವಸ್ಥೆ ಕಲ್ಪಿಸಲಾಗುವುದು. ನಿಲಯ ಪಾಲಕರು ಕಡ್ಡಾಯವಾಗಿ ಹಾಸ್ಟೆಲ್ಗಳಲ್ಲಿ ಊಟ ಸವಿದು ನಂತರ ಮಕ್ಕಳಿಗೆ ನೀಡಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಯಾವ ಮಕ್ಕಳಿಗೂ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಪಂಉಪ ಕಾರ್ಯದರ್ಶಿಗಳಾದ ಈಶ್ವರಪ್ಪ, ಸಂಜೀವಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿ.ಯೋಗಾನಂದ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸೋನಿಯಾ ವರ್ಣೇಕರ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ತಿಂಗಳಿಗೊಮ್ಮ ಆರೋಗ್ಯ ತಪಾಸಣೆ
ಹೆಣ್ಣುಮಕ್ಕಳ ವಿದ್ಯಾರ್ಥಿ ನಿಲಯಗಳಲ್ಲಿ ಪ್ರಸ್ತುತ 3 ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಇನ್ಮುಂದೆ ಪ್ರತಿ ತಿಂಗಳು ಆರೋಗ್ಯ ತಪಾಸಣೆ ಕೈಗೊಳ್ಳಬೇಕು. ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಋತುಚಕ್ರ ವಹಿಯನ್ನು ನಿರ್ವಹಿಸಬೇಕು. ಆರೋಗ್ಯ ಇಲಾಖೆಯಿಂದ ಪ್ರತಿ ತಿಂಗಳು ತಪಾಸಣೆ ಕೈಗೊಂಡು, ಮಕ್ಕಳಲ್ಲಿ ಋತುಚಕ್ರದಲ್ಲಿ ಸಮಸ್ಯೆಗಳು ಕಂಡು ಬಂದರೆ ಕೂಡಲೇ ಪೋಷಕರಿಗೆ ಮಾಹಿತಿ ನೀಡಬೇಕು ಎಂದು ಅಶ್ವಿಜ ಸಲಹೆನೀಡಿದರು.
ಕಾಲುಬಾಯಿ ಜ್ವರ ಲಸಿಕಾ ಜಿಲ್ಲೆ ಪ್ರಥಮ
ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯು ಶೇ. 100.63ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿದೆ.
ಈ ಸಾಧನೆ ಮಾಡಿರುವ ತುಮಕೂರು ಜಿಲ್ಲೆಯನ್ನು ಅಭಿನಂದಿಸಿ ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆಯ ಆಯುಕ್ತೆ ಶಿಲ್ಪಾ ನಾಗ್ ಪತ್ರ ಬರೆದಿದ್ದಾರೆ. ಈ ಹಿನ್ನೆಲೆ ಇಲಾಖೆಯ ಅಧಿಕಾರಿಗಳನ್ನು ಪ್ರಶಂಸಿಸಿರುವ ಜಿಪಂ ಸಿಇಒ ಬಿ.ವಿ.ಅಶ್ವಿಜ, ರೈತರ ಜಾನುವಾರುಗಳಿಗೆ ಲಸಿಕಾ ಅಭಿಯಾನದ ಪ್ರಗತಿಯಲ್ಲಿ ರಾಜ್ಯದಲ್ಲೇ ತುಮಕೂರು ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಇದರ ಜತೆಗೆ ಅಧಿಕಾರಿಗಳಿಗೆ ಜವಾಬ್ದಾರಿ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿಯೂ ಇದೇ ರೀತಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸರ್ಕಾರದ ಸೇವೆಗಳನ್ನು ಸಲ್ಲಿಸಬೇಕಿದೆ ಎಂದರು.
ಜಿಲ್ಲೆಯ ಗುರಿ 4,58,870 ಅನುಗುಣವಾಗಿ 4,61,748 ರಾಸುಗಳಿಗೆ ಲಸಿಕೆ ಹಾಕಿ ಶೇಕಡ 100.63 ಪ್ರಗತಿ ಸಾಧಿಸಲಾಗಿದೆ. ಶೇ.100 ಗುರಿ ಸಾಧಿಸಿದ ಮೊದಲ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು ಈ ಕಾರ್ಯದಲ್ಲಿ ಶ್ರಮಿಸಿದ ಎಲ್ಲಾ ಪಶುವೈದ್ಯಕಿಯ ಹಾಗೂ ಪಶು ಸಂಗೋಪನಾ ಇಲಾಖೆ ಸಿಬ್ಬಂದಿಗೆ ಅಭಿನಂದೆನಯನ್ನು ಅಶ್ವಿಜ ತಿಳಿಸಿದರು.