ಸಚಿವ ಬಿ.ನಾಗೇಂದ್ರ ವಜಾಗೊಳಿಸುವಂತೆ ಆಗ್ರಹಿಸಿ ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಒತ್ತಾಯಿಸಿದರು.
- ಸಿಬಿಐ ಚಾರ್ಜ್ಶೀಟ್ನಲ್ಲಿ ಗಂಭೀರ ಆರೋಪ
- ಕೈನಿಂದ ಸಂವಿಧಾನದ ಘನತೆಗೆ ಕುಂದು
- ಶಾಸಕ ಸುರೇಶ್ಗೌಡ ವಾಗ್ದಾಳಿ
ತುಮಕೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಕೇಂದ್ರೀಯ ತನಿಖಾ ದಳ) ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ಸಚಿವ ಬಿ.ನಾಗೇಂದ್ರ ವಿರುದ್ಧ ಗಂಭೀರ ಆರೋಪಗಳನ್ನು ದಾಖಲಿಸಿರುವ ಹಿನ್ನೆಲೆ ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ಕಳಂಕಿತರನ್ನು ಸಚಿವ ಸಂಪುಟಕ್ಕೆ ತಂದು ಸಂವಿಧಾನದ ಘನತೆ, ಸದನದ ಮರ್ಯಾದೆಯನ್ನು ಹಾಳು ಮಾಡಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು ಸಂವಿಧಾನ ರಕ್ಷಿಸುತ್ತೇವೆ ಎಂದು ಹೇಳುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನಾಚಿಕೆ ಆಗುವುದಿಲ್ಲವೆ? ನಾಗೇಂದ್ರರನ್ನು ಸಚಿವ ಸ್ಥಾನದಿಂದ ವಜಾಗೊಳಿಸದಿದ್ದರೆ ಸದನದ ಒಳಗೂ, ಹೊರಗೂ ಬಿಜೆಪಿ ಹೋರಾಟ ಮಾಡಲಿದೆ ಎಂದು ಗ್ರಾಮಾಂತರ ಶಾಸಕ ಬಿ.ಸುರೇಶ್ಗೌಡ ಎಚ್ಚರಿಸಿದರು.
ನಗರದಲ್ಲಿ ಬುಧವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ಗೌಡ, ವಾಲ್ಮೀಕಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಿ 30 ಮಂದಿಯ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದು, ನಾಗೇಂದ್ರಗೆ ಸಂಬಂಧಿಸಿದಂತೆ ಸುಮಾರು 1.20 ಕೋಟಿ ರೂ. ಅಕ್ರಮ ಹಣದ ಲಾಭ ತಲುಪಿರುವ ಆರೋಪವನ್ನು ತನಿಖಾ ಸಂಸ್ಥೆ ದಾಖಲಿಸಿದೆ. ಜತೆಗೆ ನಿಗಮದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಹಂತ ಹಂತವಾಗಿ ವರ್ಗಾಯಿಸಿರುವ ಅಂಶಗಳೂ ತನಿಖೆಯಲ್ಲಿ ಬಹಿರಂಗವಾಗಿವೆ. ಇಂತಹ ಗಂಭೀರ ಆರೋಪಗಳು ಹಾಗೂ ಸಿಬಿಐ ಆರೋಪಪಟ್ಟಿ ನ್ಯಾಯಾಲಯದ ಮುಂದೆ ಇರುವ ಸಂದರ್ಭದಲ್ಲಿ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನೇ ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವುದು ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಅತ್ಯಂತ ತಪ್ಪು ಸಂದೇಶವಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಎಸ್. ರವಿಶಂಕರ್ ಮಾತನಾಡಿ, 2024ರಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮನದ ಹಗರಣ ಬಯಲಾದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇದೀಗ ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು ರಾಜ್ಯ ಸರ್ಕಾರದ ದ್ವಂದ್ವ ನೀತಿಯನ್ನು ತೋರಿಸುತ್ತದೆ. ಸಿಬಿಐ ಆರೋಪಪಟ್ಟಿ ಸಲ್ಲಿಸಿರುವ ಸಂದರ್ಭದಲ್ಲಿ ನಾಗೇಂದ್ರರನ್ನು ಸಚಿವರಾಗಿ ಮುಂದುವರಿಸುವುದು ರಾಜ್ಯ ಸರ್ಕಾರದ ನೈತಿಕ ಹೊಣೆಗಾರಿಕೆಯನ್ನೇ ಪ್ರಶ್ನಿಸುವಂತಾಗಿದೆ ಎಂದರು.
ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾಗೊಳಿಸಬೇಕು. ಇಲ್ಲವಾದರೆ, ಸಾರ್ವಜನಿಕರ ಹಣದ ರಕ್ಷಣೆಗೆ ಮತ್ತು ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರಜಾಸತ್ತಾತ್ಮಕ ಹೋರಾಟವನ್ನು ತೀವ್ರಗೊಳಿಸಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಟಿ.ಎಚ್. ಹನುಮಂತರಾಜು, ಜಿಲ್ಲಾ ಕಾರ್ಯದರ್ಶಿ ಕೆ. ವೇದಮೂರ್ತಿ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ದಿಲೀಪ್, ಉಪಾಧ್ಯಕ್ಷ ವಿಜಯಕುಮಾರ್, ಮುಖಂಡ ಮರಿತಿಮ್ಮಯ್ಯ ಹಾಜರಿದ್ದರು.
ಜನರ ತೆರಿಗೆ ಹಣವನ್ನು ಲೂಟಿ ಮಾಡಿರುವ ಆರೋಪ ಹೊತ್ತಿರುವ ನಾಗೇಂದ್ರರನ್ನು ಸಚಿವರನ್ನಾಗಿ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ಗೆ ಯಾವ ನೈತಿಕತೆ ಇದೆ? ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣವನ್ನು ಅಕ್ರಮ ವರ್ಗಾವಣೆ ಮಾಡಿದ್ದು ಈ ಹಣವು ಬಡವರು, ಹಿಂದುಳಿದವರು ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಬಳಕೆಯಾಗಬೇಕಿತ್ತು. ಇಂತಹ ಸಾರ್ವಜನಿಕ ಹಣದ ದುರುಪಯೋಗದ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಸಚಿವ ಸ್ಥಾನ ನೀಡಿರುವುದು ಪ್ರಜಾಪ್ರಭುತ್ವದ ನೈತಿಕ ಮೌಲ್ಯಗಳಿಗೆ ವಿರುದ್ಧವಾಗಿದೆ.