ಜಿಲ್ಲೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಟ್ಟಡ ಕಾರ್ಮಿಕರಿಗೆ ಉಚಿತ ಪ್ರಯಾಣ

ತುಮಕೂರು: ರಾಜ್ಯ ರಸ್ತೆ ಸಾರಿಗೆ ನಿಗಮ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ರಿಯಾಯತಿ ಬಸ್‌ಪಾಸ್ ಸೌಲಭ್ಯವನ್ನು ಕಲ್ಪಿಸಿದೆ ಎಂದು ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸಲಿಚ್ಛಿಸುವ ನೋಂದಾಯಿತ ಕಟ್ಟಡ ಕಾರ್ಮಿಕರು ತುಮಕೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಮಾದರಿಯಲ್ಲಿ ಬಸ್ ಪಾಸ್ ಪಡೆಯಬೇಕು.

ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಕಾರ್ಮಿಕರು ಹಾಗೂ ಇತರೆ ಕಾರ್ಮಿಕರಿಗೆ ಮಾತ್ರ ಬಸ್ ಪಾಸ್ ವಿತರಿಸಲಾಗುವುದು.

ಕಾರ್ಮಿಕರು ಯಾವುದೇ ಜಿಲ್ಲೆಯಲ್ಲಿ ನೋಂದಣಿಯಾಗಿದ್ದರೂ ಸಹ ಪಾಸಿನಲ್ಲಿ ನಮೂದಿಸಲಾಗಿರುವ ಪ್ರಾರಂಭಿಕ ಸ್ಥಳ(ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ/ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿ)ದಿಂದ 7 ಹಂತ(ಗರಿಷ್ಠ 45 ಕಿ.ಮೀ.)ಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ.