ಮಡಿಕೇರಿ: ವಿರಾಜಪೇಟೆ/ಮಡಿಕೇರಿ ಮುಖ್ಯರಸ್ತೆಯ ಬೇತ್ರಿಯಲ್ಲಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಜೀವ ಕಳೆದುಕೊಂಡಿದ್ದಾರೆ.
ಟಿಪ್ಪರ್ ಲಾರಿ ಹಾಗೂ ಮಾರುತಿ ಓಮ್ನಿ ಕಾರ್ ನಡುವೆ ಅಪಘಾತ ಸಂಭವಿಸಿತ್ತು. ಈ ಅಪಘಾತ ವೇಳೆ ಟಿಪ್ಪರ್ ಲಾರಿ ಮಗುಚಿಬಿದ್ದು, ಹಲವಾರು ಬಾರಿ ಪಲ್ಟಿ ಹೊಡೆದಿತ್ತು. ರಸ್ತೆ ಬದಿ ನಿಂತಿದ್ದ ಕಾರು ಸಂಪೂರ್ಣ ಜಖಂಗೊಂಡಿದೆ. ವಾಹನ ಓವರ್ ಟೇಕ್ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಕಾರ್ಮಿಕರಾದ ಹರೀಶ್, ಸುಬ್ರಮಣಿ ಸಾವಿಗೀಡಾಗಿದ್ದಾರೆ.
ಮುಖ್ಯರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಿಂದ ಎರಡು ಗಂಟೆಗಳ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು. ಗಾಯಾಳುಗಳನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಇಬ್ಬರು ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದರು. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.