ಚನ್ನರಾಯಪಟ್ಟಣ : ತಾಲೂಕಿನ ದಿಡಗ ಮತ್ತು ಶ್ರವಣಬೆಳಗೊಳದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ಪಟ್ಟಣದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಿಹಿ ತಿನಿಸಿ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಿ ಮಾತನಾಡಿದರು.
ತಾಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಆ ಮೂಲಕ ಶಾಲಾ-ಕಾಲೇಜುಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಹೆಚ್ಚುವರಿಯಾಗಿ ಇನ್ನೊಂದು ಕರ್ನಾಟಕ ಪಬ್ಲಿಕ್ ಶಾಲೆಗೆ ಬೇಡಿಕೆ ಸಲ್ಲಿಸಲಾಗಿದೆ. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಿಸಿಎ ತರಗತಿಗಳನ್ನು ಆರಂಭಿಸಿದ್ದು, ಈಗಾಗಲೇ 30 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಸ್ನಾತಕೋತ್ತರ ಕೇಂದ್ರ ತೆರೆಯುವ ಚಿಂತನೆಯಿದ್ದು, ಇದಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳಲಾಗುತ್ತಿದೆ. ವಿಶ್ವವಿದ್ಯಾಲಯದಿಂದ ಅನುಮೋದನೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಕಾಲೇಜು ಆರಂಭದ ಸಮಯ ಹಾಗೂ ಬಿಡುವ ಸಮಯದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳ ನಿಲುಗಡೆಗೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಹಿರೀಸಾವೆಯಲ್ಲೂ ಇದೇ ರೀತಿಯ ಅನುಕೂಲ ಕಲ್ಪಿಸಲಾಗಿದೆ ಎಂದರು.
ಈ ವರ್ಷ ಪಠ್ಯಪುಸ್ತಕಗಳನ್ನು ಸಕಾಲದಲ್ಲಿ ನೀಡಲು ಸರ್ಕಾರ ಎಚ್ಚರಿಕೆ ವಹಿಸಿದೆ. ಈ ಹಿಂದೆ ತಾಲೂಕಿನ ಹೊಸ ಶಾಲೆಗಳಲ್ಲಿ 30 ಹೊಸ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿತ್ತು. ಪ್ರಸ್ತಕ ಸಾಲಿನಲ್ಲಿ 25 ರಿಂದ 30 ಕೊಠಡಿಗಳನ್ನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು. ಒಂದರಿಂದ ಎಂಟನೇ ತರಗತಿವರೆಗೆ ಮಧ್ಯಾಹ್ನದ ಬಿಸಿಯೂಟವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, 9 ಮತ್ತು 10ನೇ ತರಗತಿಗೆ ರಾಜ್ಯ ಸರ್ಕಾರ ನೀಡುತ್ತಿದೆ. ಅಜೀಂ ಪ್ರೇಮ್ ಜೀ ಪ್ರತಿಷ್ಠಾನದ ವತಿಯಿಂದ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಪಟ್ಟಣದಲ್ಲಿರುವ ಪಿಎಂಶ್ರೀ ಸರ್ಕಾರಿ ಶಾಲೆಯಲ್ಲಿ ಹೈಟೆಕ್ ಶೌಚಗೃಹ ನಿರ್ಮಿಸಲಾಗಿದೆ. ಮಾಧ್ಯಮಿಕ ಶಾಲಾ ಆವರಣದಲ್ಲಿ ಮಳೆ ಬಂದಾಗ ನೀರು ನಿಲ್ಲದಂತೆ ಹೊರ ಹಾಕಲು ಅಗತ್ಯ ಕಾಮಗಾರಿಗಳನ್ನು ಇನ್ನೊಂದು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಎನ್. ಅನಿಲ್ ಮಾತನಾಡಿ, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಕಳೆದ ಸಾಲಿನಲ್ಲಿ 17 ಮಕ್ಕಳ ಮನೆ ಶಾಲೆಗಳನ್ನು ತೆರೆದಿದ್ದು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ತಾಲ್ಲೂಕಿನಲ್ಲಿ 27 ಮಕ್ಕಳ ಮನೆ (ಎಲ್‌ಕೆಜಿ ಮತ್ತು ಯುಕೆಜಿ ಶಾಲೆ) ಆರಂಭಿಸಲಾಗುವುದು. ಇದರಿಂದ ಸರ್ಕಾರಿ ಶಾಲೆಗಳ ಪ್ರವೇಶಾತಿ ಹೆಚ್ಚಾಗಲಿದೆ. ತಾಲೂಕಿನಲ್ಲಿ ಮುಚ್ಚಲಾಗಿದ್ದ 6 ಶಾಲೆಗಳನ್ನು ಈ ವರ್ಷ ಆರಂಭಿಸಲಾಗಿದ್ದು ತಾಲೂಕಿಗೆ ಮೂರು ಆಂಗ್ಲ ಮಾಧ್ಯಮ ಶಾಲೆಗಳು ಮಂಜೂರಾಗಿದೆ. ಶೈಕ್ಷಣಿಕ ಪ್ರಗತಿಗೆ ಪ್ರಸಕ್ತ ಸಾಲಿನಲ್ಲಿ ಜೂನ್ ತಿಂಗಳಿನಿಂದಲೇ ಸಮಾಲೋಚನಾ ಸಭೆ ಕಾರ್ಯಾಗಾರ ಆರಂಭವಾಗಲಿದ್ದು, ಪ್ರತಿ ಶನಿವಾರ ಅರ್ಧ ದಿನದ ಶಾಲೆಯ ಬದಲಾಗಿ ಪೂರ್ಣ ದಿನದ ಶಾಲೆಯಾಗಿ ಪರಿವರ್ತಿಸಿ ಒಂದು ವಿಷಯದ ಬಗ್ಗೆ ಬೋಧನೆ ಮಾಡಲಾಗುವುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ದೀಪಾ, ಪುರಸಭಾ ಸದಸ್ಯೆ ಕೆ.ಎನ್. ಬನಶಂಕರಿ ಮಾತನಾಡಿದರು. ಪಿಎಂಶ್ರೀ ಶಾಲೆಯ ನೋಡಲ್ ಅಧಿಕಾರಿ ಅನುರಾಧಾ, ಪುರಸಭಾಧ್ಯಕ್ಷ ಸಿ.ಎಸ್.ಮೋಹನ್, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಚ್.ಡಿ. ಉಮಾಶಂಕರ್, ಮುಖ್ಯಶಿಕ್ಷಕ ಪ್ರಕಾಶ್, ಶಿಕ್ಷಣ ಸಂಯೋಜಕರಾದ ಲೋಕೇಶ್, ಶ್ರೀನಿವಾಸ್, ಎಸ್‌ಡಿಎಂಸಿ ಅಧ್ಯಕ್ಷ ಲೋಕೇಶ್ ಇದ್ದರು.
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ಕೊರತೆಯನ್ನು ನೀಗಿಸಲು ಸರ್ಕಾರವು 2025-26ನೇ ಶೈಕ್ಷಣಿಕ ವರ್ಷಕ್ಕಾಗಿ 51000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡುತ್ತಿರುವುದು ಸ್ವಾಗತಾರ್ಹ. ತಾಲೂಕಿನಲ್ಲಿ ಅವಶ್ಯವಿರುವ ಶಿಕ್ಷಕರ ಸಂಖ್ಯೆಗೆ ಅನುಗುಣವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು. ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 65 ಸಾವಿರ ಶಿಕ್ಷಕರನ್ನು ಸರ್ಕಾರ ಕೂಡಲೇ ನೇಮಕ ಮಾಡಬೇಕು.
ಸಿ.ಎನ್.ಬಾಲಕೃಷ್ಣ
ಶಾಸಕರು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ.