ಜಿಲ್ಲೆ

ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಮುಂಚೂಣಿ: ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಸೋತಿದ್ದರೂ ಉಡುಪಿ ಜಿಲ್ಲೆಯಲ್ಲಿ ಐದೂ ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆದಿದ್ದು, ಕಾರ್ಯಕರ್ತರ ಸಾಧನೆ ಅಭಿನಂದನೀಯ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಬುಧವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯನ್ನುದ್ದೇಶಿಸಿ ಮಾತನಾಡಿದರು. ಜನಸಂಘದ ಕಾಲದಲ್ಲೇ ವಿಶೇಷ ಸಾಧನೆ ಮೂಲಕ ದೇಶದಲ್ಲಿ ಹೆಸರುವಾಸಿಯಾಗಿದ್ದ ಉಡುಪಿ ಜಿಲ್ಲೆ ಮಗದೊಮ್ಮೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶೇ. 100 ಫಲಿತಾಂಶದೊಂದಿಗೆ ದಾಖಲೆ ಮಾಡಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ದೇಶಕ್ಕೆ ಸಮರ್ಥ ನೇತೃತ್ವ ನೀಡುವ ನಿಟ್ಟಿನಲ್ಲಿ ನರೇಂದ್ರ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಲು ಎಲ್ಲರೂ ಪಣ ತೊಡಬೇಕು. ಕೊರೋನ ಸವಾಲಿನ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಪ್ರಗತಿಯ ಪಥದಲ್ಲಿ ಸಾಗುತ್ತಿದ್ದು, ಆರ್ಥಿಕ ಸಾಧನೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನದಲ್ಲಿದೆ. ಮುಂದಿನ ಎರಡು ಮೂರು ವರ್ಷಗಳಲ್ಲಿ 3ನೇ ಸ್ಥಾನವನ್ನು ತಲುಪುವ ಗುರಿಯೊಂದಿಗೆ ಭಾರತ ವಿಶ್ವದ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿ ಕುಮಾರ್ ಮಾತನಾಡಿ, ಬಿಜೆಪಿಗೆ ರಾಜ್ಯದಲ್ಲಿ ಅನಿರೀಕ್ಷಿತ ಫಲಿತಾಂಶ ದೊರೆತರೂ ಉಡುಪಿ ಜಿಲ್ಲೆ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಜಿಲ್ಲೆಯ ಹಿರಿಮೆ ಗರಿಮೆ ಹೆಚ್ಚಿಸಿದೆ. ಜೂ.23ರಂದು ಪ್ರಧಾನಿ ಮೋದಿಯವರು ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿ ಕೀ ವೋಟರ್ಸ್‌ಗಳನ್ನು ಗುರುತಿಸಿ, ಭೇಟಿ ಮಾಡುವ ಜೊತೆಗೆ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಸೋಶಿಯಲ್ ಮೀಡಿಯಾ ಟೀಮ್ ಹಾಗೂ ಹಿರಿಯ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗುವುದು. ತಾ.ಪಂ., ಜಿ.ಪಂ., ಮತ್ತು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪೂರಕ ವಾತಾವರಣವನ್ನು ಸದೃಢಗೊಳಿಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಶಾಸಕರಾದ ವಿ.ಸುನೀಲ್ ಕುಮಾರ್ ಕಾರ್ಕಳ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ಗುರುರಾಜ್ ಗಂಟಿಹೊಳಿ ಬೈಂದೂರು, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಉಮೇಶ್ ಎ. ನಾಯ್ಕ್, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.