ಜಿಲ್ಲೆ

ನಕ್ಸಲರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ

ಉಡುಪಿ: ನಕ್ಸಲ್​ ವಿಕ್ರಂ ಗೌಡ ಎನ್​ಕೌಂಟರ್​ ನಕಲಿ ಅಲ್ಲ. ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಕ್ರಮ್​ ಗೌಡ ವಿರುದ್ಧ ಹಲವು ಪ್ರಕರಣಗಳಿವೆ. ನಕ್ಸಲ್​ ಚಟುವಟಿಕೆ ನಿಯಂತ್ರಿಸಲು ಸರ್ಕಾರ ನಿರ್ಧರಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್​ ಸ್ಪಷ್ಟಪಡಿಸಿದ್ದಾರೆ.

ಗೃಹ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್​ ಕೌಂಟರ್​ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು. ಕಾನೂನು ಪ್ರಕಾರ ಕೂಂಬಿಂಗ್​ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳಿದ್ದವು. ವಿಕ್ರಂ ಗೌಡ ಫೈರಿಂಗ್​ ಮಾಡಿದಾಗ ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವಕ್ಕೆ ಹಾನಿಯಾಗುತ್ತಿತ್ತು ಎಂದರು.

ನಕ್ಸಲ್​ ಚಟುವಟಿಕೆ ಬೇರು ಸಮೇತ ಕಿತ್ತು ಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ ಎಂದು ಹೇಳಿದರು.

ಕಾಂಗ್ರೆಸ್​ ಪಕ್ಷದಲ್ಲಿ ಭಿನ್ನಮತವಿಲ್ಲ

ಕಾಂಗ್ರೆಸ್​ ನಲ್ಲಿ ಯಾವುದೇ ಭಿನ್ನಮತ ಇಲ್ಲ. ಭಿನ್ನಮತ ಇರೋದು ಬಿಜೆಪಿಯಲ್ಲಿ ಮಾತ್ರ. ನಮ್ಮಲ್ಲಿ ಭಿನ್ನಮತವಿಲ್ಲ. ಅನ್ನೋದಕ್ಕೆ ಉಪಚುನಾವಣೆ ಫಲಿತಾಂಶವೇ ಉತ್ತರ ಎಂದು ಸಚಿವೆ ಹೇಳಿದರು.

ವಿಕಲ ಚೇತನರಿಗೆ ಅನುದಾನ ಕಡಿತ ಇಲ್ಲ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 32 ಸಾವಿರ ಕೋಟಿ ರೂ. ಹೆಚ್ಚಿನ ಗಾತ್ರದ ಬಜೆಟ್​ ಹೊಂದಿದೆ. ವಿಕಲಾಂಗ ಚೇತನ ಯಾವುದೇ ಅನುದಾನವನ್ನು ಕಡಿತ ಮಾಡಿಲ್ಲ ಎಂದರು.

ಬಳ್ಳಾರಿ ಜಿಲ್ಲಾಡಳಿತದೊಂದಿಗೆ ಸಂಪರ್ಕ

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿ ಬಾಣಂತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಸಾಯಂಕಾಲ 4 ಗಂಟೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ. ನಾನು ಮತ್ತು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಬಳ್ಳಾರಿ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದರು.

ಕಳಪೆ ಆಹಾರ ಪೂರೈಸಿದರೆ ಕ್ರಮ

ರಾಜ್ಯದಲ್ಲಿ ಅಂಗನವಾಡಿಗೆ 50 ವರ್ಷದ ಇತಿಹಾಸವಿದೆ. 70 ಸಾವಿರ ಅಂಗನವಾಡಿಯಲ್ಲಿ 35 ಲಕ್ಷ ಮಕ್ಕಳ ಪಾಲನೆ ಮಾಡಲಾಗುತ್ತದೆ. ಅಂಗನವಾಡಿಗಳಲ್ಲಿ ಕಳಪೆ ಅಕ್ಕಿ ವಿತರಣೆ, ಆಹಾರ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಹೆಬ್ಬಾಳಕರ್​ ಎಚ್ಚರಿಕೆ ನೀಡಿದರು.