ಲಭಿಸಿದ ವಿಪ ಚುನಾವಣೆ ಟಿಕೆಟ್ | ಫೇಸ್ಬುಕ್ನಲ್ಲಿ ನೋವು ತೋಡಿಕೊಂಡ ಉಡುಪಿ ಮಾಜಿ ಶಾಸಕ
ವಿಜಯವಾಣಿ ಸುದ್ದಿಜಾಲ ಉಡುಪಿ
ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಟಿಕೆಟ್ ವಂಚಿತ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್, ಪಕ್ಷದ ವರಿಷ್ಠರ ನಿಲುವಿಗೆ ಫೇಸ್ಬುಕ್ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲೂ ಟಿಕೆಟ್ ನೀಡದ್ದರಿಂದ ತೀವ್ರ ನೊಂದಿದ್ದ ಅವರು, ಇದೀಗ ಸಾಮಾಜಿಕ ಜಾಲತಾಣದ ಮೂಲಕ ವರಿಷ್ಠರ ನಿಲುವು ಖಂಡಿಸಿದ್ದು, ತನ್ನ ನೋವು ತೋಡಿಕೊಂಡಿದ್ದಾರೆ. ಅವರ ಬರವಣಿಗೆಯ ಸಾರ ಈ ಕೆಳಗಿನಂತಿದೆ.
ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ನ ಚಿಕ್ಕಮಗಳೂರು ಅಭ್ಯರ್ಥಿಗೆ, ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು, ನಾಲ್ಕು ದಶಕಗಳಿಂದ ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಬಿಜೆಪಿ ಸಂಪ್ರದಾಯ ಮುರಿದಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ. ಪ್ರಸ್ತುತ ಸ್ಥಿತಿಯಲ್ಲಿ ಬಿಜೆಪಿಯ ನಿಲುವಿನಿಂದ ವಿಚಲಿತನಾಗಿದ್ದೇನೆ.
1994ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿರುತ್ತೇನೆ. ಆದರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತು.
ನನ್ನ ಹೆಸರಿನ ಬದಲು ಬೇರೆ ಹೆಸರು ಘೋಷಣೆಯಾಗಿದ್ದು, ಟಿವಿ ಮೂಲಕ ತಿಳಿಯಿತು. ಆದರೆ, ನಾನು ವಿಚಲಿತನಾಗದೆ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ನನಗೆ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ಹಿರಿಯರು ಭರವಸೆ ನೀಡಿದ್ದರು. ಆ ಪ್ರಕಾರ ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅತಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ್ದೇನೆ. ಅಲ್ಲದೆ, ಪಕ್ಷ ನೀಡಿದ ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಭಾರಿ ಜವಾಬ್ದಾರಿಯನ್ನು 40 ದಿನಗಳ ಕಾಲ ಶಿವಮೊಗ್ಗದಲ್ಲಿ ಉಳಿದು ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಈಗ ವಿಧಾನ ಪರಿಷತ್ ಟಿಕೆಟ್ ಘೋಷಿಸಿದ್ದು, ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಮಾಡಿದ ಅನ್ಯಾಯಕ್ಕೆ ನ್ಯಾಯ ಕೊಡುವವರು ಯಾರು?
ಪಕ್ಷ ತೆಗೆದುಕೊಂಡಿರುವ ಈ ನಿಲುವಿಂದ ವಿಚಲಿತನಾಗಿದ್ದೇನೆ. ಇದು ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪಕ್ಷದ ಅಭಿಮಾನಿಗಳು ಚಿಂತಿಸುವ ಕಾಲ. ಚರ್ಚಿಸೋಣ, ನಿಮ್ಮ ಸಲಹೆಯ ನಿರೀಕ್ಷೆಯಲ್ಲಿ…
ರಾಜ್ಯದಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಖಾತೆ ತೆರಯುವ ಪೂರ್ವದಲ್ಲಿಯೇ ವಿಧಾನ ಪರಿಷತ್ನಲ್ಲಿ ಬಿಜೆಪಿ ಶಾಸಕರು ಇದ್ದರು. ಉಡುಪಿಯಿಂದ ಕರಂಬಳ್ಳಿ ಸಂಜೀವ ಶೆಟ್ಟಿ ಹಾಗೂ ಶಿವಮೊಗ್ಗದಿಂದ ಡಿ.ಎಚ್. ಶಂಕರಮೂರ್ತಿ ಅವರು 40 ವರ್ಷದ ಹಿಂದೆಯೇ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಆದರೆ, ಈ ಬಾರಿ ಉಡುಪಿಯನ್ನು ಕಡೆಗಣಿಸಿರುವುದು ಸರಿಯಲ್ಲ. ಎಂಎಲ್ಸಿ ಟಿಕೆಟ್ ಆಕಾಂಕ್ಷಿಯೂ ಆಗಿದ್ದ ನನಗೆ ನೀಡಿದ ಭರವಸೆಯನ್ನು ವರಿಷ್ಠರು ಹುಸಿಯಾಗಿಸಿದ್ದಾರೆ. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾದ ನಾನು, ಪಕ್ಷದ ಹಿತದೃಷ್ಟಿಯಿಂದ ನೋವು-ಖಂಡನೆ ವ್ಯಕ್ತಪಡಿಸಿದ್ದೇನೆ. ಪಕ್ಷ ಬಿಡಲ್ಲ, ಬಿಜೆಪಿಯ ಕಾರ್ಯಕರ್ತನಾಗಿಯೇ ಕೆಲಸ ಮುಂದುವರಿಸುತ್ತೇನೆ ಎಂದು ಕೆ.ರಘುಪತಿ ಭಟ್ ವಿಜಯವಾಣಿಗೆ ದೂರವಾಣಿ ಮೂಲಕ ಪ್ರತಿಕ್ರಿಯೆ ನೀಡಿದರು.