ಉಡುಪಿ: ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯಲ್ಲಿ ಮಾ.14 ಮತ್ತು 15 ರಂದು ನಡೆಯುವ, ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಪೂರ್ವಭಾವಿ ಸಭೆ ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯವಿರುವ ಪೊಲೀಸ್, ಅಗ್ನಿಶಾಮಕ ಹಾಗೂ ಆರೋಗ್ಯ ವ್ಯವಸ್ಥೆ ಕುರಿತಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದ ಅಪರ ಜಿಲ್ಲಾಧಿಕಾರಿ, ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಒಒಡಿ ಸೌಲಭ್ಯ ಕುರಿತಂತೆ ಹಾಗೂ ಸಮ್ಮೇಳನಕ್ಕೆ ಆಸಕ್ತ ಶಾಲಾ ಮಕ್ಕಳನ್ನು ಕರೆತರುವ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಸಮ್ಮೇಳನದಲ್ಲಿ ಸುಮಾರು 2000 ಮಂದಿ ಭಾಗವಹಿಸಲಿದ್ದು, ಊಟೋಪಚಾರದ ಕುರಿತಂತೆ ಜಿಲ್ಲೆಯ ದೇವಾಲಯಗಳಿಂದ ಅಗತ್ಯ ನೆರವು ನೀಡಲಾಗುವುದು ಎಂದ ಅಪರ ಜಿಲ್ಲಾಧಿಕಾರಿ, ಯಾವುದೇ ಕೊರತೆಯಾಗದಂತೆ ಅಗತ್ಯ ಕ್ರಮ ವಹಿಸುವಂತೆ ಸಂಘಟಕರಿಗೆ ಸೂಚಿಸಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ, ಸಂಘಟನಾ ಕಾರ್ಯದರ್ಶಿ ಆರೂರು ತಿಮ್ಮಪ್ಪ ಶೆಟ್ಟಿ, ಕಾಪು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಮರಾಠೆ, ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಬ್ರಹ್ಮಾವರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಾಲು ನಾರಾಯಣ ಮಡಿ, ಜ್ಯೋತಿ ಗುರುಪ್ರಸಾದ್, ಭುವನ ಪ್ರಸಾದ್ ಹೆಗ್ಡೆ ಉಪಸ್ಥಿತರಿದ್ದರು.
ದಯ್ಯರೇ ದಯ್ಯ ಜನಪದ ಸಂಗಮ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಸಾಹಿತಿ ಡಾ.ವೈದೇಹಿ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಕವಿಗೋಷ್ಠಿ, ವಿದ್ಯಾರ್ಥಿ ಗೋಷ್ಠಿ ಸೇರಿದಂತೆ ವಿವಿಧ ಗೋಷ್ಠಿಗಳು ಮತ್ತು ಚರ್ಚೆಗಳು ನಡೆಯಲಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದಯ್ಯರೇ ದಯ್ಯ ಜನಪದ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದರು.