ಉಡುಪಿ: ನೂತನ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜುಗಳು ಆರಂಭಗೊಂಡು 15 ದಿನ ಕಳೆದರೂ ಸಹ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಕೆ ಅವಕಾಶ ನೀಡದೆ, ರಾಜ್ಯ ಸರ್ಕಾರ ಬಡ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಯಶ್ಪಾಲ್, ತಕ್ಷಣ ರಾಜ್ಯಾದ್ಯಂತ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಸಹಿತ ಎಲ್ಲ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಕೂಡಲೇ ಅರ್ಜಿ ಸ್ವೀಕರಿಸಬೇಕು. ಅರ್ಹ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಸೂಕ್ತ ವಸತಿ ನಿಲಯದ ವ್ಯವಸ್ಥೆಯಿಲ್ಲದೆ ತರಗತಿಗೆ ಹಾಜರಾಗಲು ಆಗುತ್ತಿಲ್ಲ. ಉಡುಪಿ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಹಾಸ್ಟೆಲ್ ವ್ಯವಸ್ಥೆಯಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ದುಬಾರಿ ದರದ ಪಿಜಿ, ಖಾಸಗಿ ವ್ಯವಸ್ಥೆ ಅವಲಂಬಿತರಾಗಿ ಆರ್ಥಿಕವಾಗಿ ಸಂಕಷ್ಟ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವ ಸನ್ನಿವೇಶ ನಿಮಾರ್ಣವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ರಾಜ್ಯ ಸರ್ಕಾರ ಸಮಸ್ಯೆಯ ಗಂಭೀರತೆ ಅರಿತು, ಬಡ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಕ್ರಮ ವಹಿಸಬೇಕು. ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹಾಗೂ ಹಿಂದುಳಿದ ವರ್ಗಗಳ ಸಚಿವರಾದ ಶಿವರಾಜ್ ತಂಗಡಗಿ ಅವರಿಗೂ ಮನವಿ ಮಾಡಿದ್ದೇನೆ. ಯಶ್ಪಾಲ್ ಸುವರ್ಣ. ಶಾಸಕ, ಉಡುಪಿ