ಜಿಲ್ಲೆ

ಜನಸಾಮಾನ್ಯ ಕಲ್ಯಾಣ ಯೋಜನೆ ಅನುಷ್ಠಾನಗೊಳಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು

Udupi

ಉಡುಪಿ: ಕೋವಿಡ್‌ನಿಂದಾಗಿ ಪ್ರಸ್ತುತ ಸಾಲಿನ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಅನುಷ್ಠಾನ ನಿಗದಿತ ಗುರಿ ಸಾಧಿಸಿಲ್ಲ. ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು ತಿಳಿಸಿದರು.

ಶನಿವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನೆರೆಯಿಂದಾದ ನಷ್ಟದ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಅವರು, ಮಳೆಯಿಂದ ಹಾನಿಯುಂಟಾದ ಮನೆಗಳ ನಿರ್ಮಾಣ ಕಾರ್ಯಗಳನ್ನು ಪೂರ್ಣಗೊಳಿಸಲು ಜನಸಾಮಾನ್ಯರಿಗೆ ಅಗತ್ಯ ನೆರವನ್ನು ಕಲ್ಪಿಸಬೇಕು ಎಂದರು.

ಕುಡಿಯುವ ನೀರಿನ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಶಾಶ್ವತ ಅಭಿವೃದ್ಧಿಗಾಗಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಮಹಿಳೆಯರು ಸ್ವಾವಲಂಬಿಗಳಾಗಲು ಸ್ವ-ಉದ್ಯೋಗ ಯೋಜನೆ ಜಾರಿಗೆ ತರಲಾಗಿದ್ದು, ಇದನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದರೊಂದಿಗೆ ಅವರು ಆರ್ಥಿಕರಾಗಿ ಸಬಲರಾಗಬೇಕು. ಇಂತವರ ಯಶೋಗಾಥೆಗಳನ್ನು ಪ್ರಚುರಪಡಿಸಬೇಕು ಎಂದರು. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಜಾರಿ ಸೇರಿದಂತೆ ಅಂಗನವಾಡಿ ಮಕ್ಕಳಿಗೆ ಹಾಲು ಪೌಡರ್ ವಿತರಣೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಎರಡು ವರ್ಷಗಳಲ್ಲಿ ಮೀನುಗಾರರ ಮಹಿಳೆಯರಿಗೆ ನೀಡಿದ ಅಲ್ಪಾವಧಿ ಸಾಲವನ್ನು ಮನ್ನಾ ಮಾಡಲು 38 ಕೋಟಿ ರೂ. ಬಿಡುಗಡೆಯಾಗಿದ್ದು, ಅದರಲ್ಲಿ 31 ಕೋಟಿ ರೂ. ಮಾತ್ರ 11000 ಜನರ ಖಾತೆಗಳಿಗೆ ಜಮಾ ಆಗಿದೆ. ಬಾಕಿ ಉಳಿದ 4050 ಜನರ ಖಾತೆಗೆ ಆಧಾರ್‌ಲಿಂಕ್ ಆಗದ ಕಾರಣ ಜಮೆಯಾಗಿಲ್ಲ. ಈ ಬಗ್ಗೆ ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.