ಜಿಲ್ಲೆ

ಸಿಇಟಿ ಪರೀಕ್ಷೆಗೆ ಜಿಲ್ಲೆಯಲ್ಲಿ 5,712 ವಿದ್ಯಾರ್ಥಿಗಳು

ಗೋಪಾಲಕೃಷ್ಣ ಪಾದೂರ್

ಉಡುಪಿ: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ಮೇ 20 ಮತ್ತು 21 ರಂದು ನಡೆಯಲಿದ್ದು, ಉಡುಪಿಯಲ್ಲಿ 6, ಕಾರ್ಕಳದಲ್ಲಿ 2, ಕುಂದಾಪುರದಲ್ಲಿ 2 ಹಾಗೂ ಬ್ರಹ್ಮಾವರದಲ್ಲಿ 2 ಸೇರಿ ಒಟ್ಟು 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 5712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ (ಪ್ರಭಾರ) ಪ್ರಸನ್ನ ತಿಳಿಸಿದರು.

ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ, 2023ನೇ ನಾಲಿನ ಸಿಇಟಿ ಪರೀಕ್ಷೆ ಮತ್ತು ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಿಇಟಿ ಪರೀಕ್ಷೆ ಕುರಿತು ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡಬೇಕು. ಖಜಾನೆಯಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸಬೇಕು. ಪ್ರಶ್ನೆ ಪತ್ರಿಕೆ ವಿತರಣೆಗೆ ನೇಮಿಸಿರುವ ತಾಲೂಕುಗಳ ತಹಶೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪ್ರಾಂಶುಪಾಲರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ಸದಸ್ಯರ ತಂಡ ಪೊಲೀಸ್ ಭದ್ರತೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ತಲುಪಿಸುವಂತೆ ಸೂಚನೆ ನೀಡಿದರು.

ಪ್ರತೀ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿ ಕೆಮರಾ ಗಳ ಅಳವಡಿಕೆ ಮತ್ತು ಕೊಠಡಿ ಮೇಲ್ವಿಚಾರಕನ್ನು ನೇಮಿಸಲಾಗುವುದು ಎಂದರು.

ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್‌ಗಳು, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು, ತುಂಬು ತೋಳಿನ ಶರ್ಟ್, ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್) ತರುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಮೇ 23 ರಿಂದ ಜೂನ್ 3 ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ ಮೊದಲಾದವರು ಉಪಸ್ಥಿತರಿದ್ದರು.