ಮಧು ಅಲಿಯಾಸ್ ಉಮೇಶ್ ಬಂಧಿತ ಆರೋಪಿ.
ಉಡುಪಿ: ದೇವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಹಾಸನದ ಚನ್ನರಾಯಪಟ್ಟಣದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿ ಬಿಡಗನಹಳ್ಳಿ ಗ್ರಾಮದ ನಿವಾಸಿ ಮಧು ಅಲಿಯಾಸ್ ಉಮೇಶ್ ಬಂಧಿತ ಆರೋಪಿ.
ಕಳೆದ 2013ರಲ್ಲಿ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೇವಸ್ಥಾನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ವಿರುದ್ಧ ಸಿಜೆಎಂ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಈತ ಕಳೆದ 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಈತನ ವಿರುದ್ಧ ನ್ಯಾಯಾಲಯವು ವಾರೆಂಟ್ ಜಾರಿಗೊಳಿಸಿತ್ತು. ಪೊಲೀಸರು ಖಚಿತ ಮಾಹಿತಿ ಮೇರೆಗೆ ಜೂನ್ 18ರಂದು ಮುಂಜಾನೆ ಹಾಸನದ ಚನ್ನರಾಯಪಟ್ಟಣ ಬಳಿ ಆರೋಪಿಯನ್ನು ದಸ್ತಗಿರಿ ಮಾಡಿ ಠಾಣೆಗೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಜೂನ್ 29ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಆರೋಪಿಯನ್ನು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.
ಬಂಧಿತ ಆರೋಪಿ ಮಧು ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಒಂದು ದೇವಸ್ಥಾನ ಕಳವು ಪ್ರಕರಣ, ಕಾಪು ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೇವಸ್ಥಾನ ಕಳವು ಪ್ರಕರಣ ಹಾಗೂ ಬೆಂಗಳೂರು ನಗರದಲ್ಲಿ ಎರಡು ಹಲ್ಲೆ ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ.