ಉಡುಪಿ: ದೇಶಕ್ಕಾಗಿ, ಪಕ್ಷಕ್ಕಾಗಿ ಜೀವನವನ್ನೇ ಸಮರ್ಪಿಸಿದ ದಿವ್ಯ ಚೇತನ ಪಂಡಿತ್ ದೀನದಯಾಳ್ ಉಪಾಧ್ಯಾಯ. ಅವರ ತ್ಯಾಗ, ಬಲಿದಾನ, ತತ್ವಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಭಾರತೀಯ ಜನಸಂಘದ ಮಾಜಿ ಅಧ್ಯಕ್ಷ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ ಅಧ್ಯಕ್ಷತೆ ವಹಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.
ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಕನಸು ನನಸಾಗಿದೆ. ಸಂವಿಧಾನದ 370ನೇ ವಿಧಿ ರದ್ಧತಿಯಿಂದಾಗಿ ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ. ಪಂಡಿತ್ ಜೀ ಅಂತ್ಯೋದಯ ಪರಿಕಲ್ಪನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳಲ್ಲಿ ಪ್ರತಿಫಲಿಸುತ್ತಿದೆ. ಪಕ್ಷದ ಕಾರ್ಯಕರ್ತರು ಸೇವಾ ಮನೋಭಾವನೆಯಿಂದ ಕೆಲಸ ಮಾಡುವುದು ಪಕ್ಷ ಕಟ್ಟಲು ಶ್ರಮಿಸಿದ ಹಿರಿಯರಿಗೆ ಸಲ್ಲಿಸುವ ಗೌರವ ಎಂದರು.
ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಮಾತನಾಡಿ, ಪಂಡಿತ್ ದೀನದಯಾಳ್ ಉಪಾಧ್ಯಾಯ ಹತ್ಯೆ ಇಂದಿಗೂ ನಿಗೂಢವಾಗಿದೆ. ಜನಸಂದ ರಾಷ್ಟ್ರೀಯ ಅಧ್ಯಕ್ಷರ ಕೊಲೆ ತನಿಖೆಯನ್ನೇ ಕಾಂಗ್ರೆಸ್ ಸರ್ಕಾರ ಸರಿಯಾಗಿ ಮಾಡಿಲ್ಲ. ಕೊಲೆಗಾರಿಗೆ ಶಿೆಯೂ ಆಗಿಲ್ಲ. ಇದು ಕಾಂಗ್ರೆಸ್ ನೈಜ ಮುಖ ಎಂದು ಹೇಳಿದರು.
ಬಿಜೆಪಿ ಮಂಗಳೂರು ವಿಭಾಗ ಎಸ್ಐಆರ್ ಸಂಚಾಲಕ ಕೆ.ಉದಯ ಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಮಟ್ಟಾರ್ ರತ್ನಾಕರ ಹೆಗ್ಡೆ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು ಮೊದಲಾದವರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಎಂ. ಅಂಚನ್ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ಶ್ರೀಕಾಂತ್ ನಾಯಕ್ ವಂದಿಸಿದರು.