ಉಡುಪಿ: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಕಾರ್ಯಕ್ರಮಗಳಲ್ಲ. ಅವು ಸಮಾಜವನ್ನು ಪರಿವರ್ತನೆ ಮಾಡುವ ಶಕ್ತಿ ಹೊಂದಿವೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬುವ ಉದ್ದೇಶದಿಂದ ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.
ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ ಮತ್ತು ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದ ಅಚ್ಚೇ ದಿನ್ ಮಾತ್ರ ಇನ್ನೂ ಬಂದಿಲ್ಲ. ದೇಶದಲ್ಲಿ ಆಹಾರ ಪದಾರ್ಥಗಳು, ಗ್ಯಾಸ್, ಇಂಧನ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ ಪುರುಷರ ಆದಾಯ ಹೆಚ್ಚಾಗಿಲ್ಲ. ನಿರುದ್ಯೋಗಿ ಯುವಕರ ಸಂಖ್ಯೆ ಹೆಚ್ಚುತ್ತಿದ್ದು, ಕೋಟ್ಯಂತರ ಯುವಕರು ಉದ್ಯೋಗವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಪರಿಸ್ಥಿತಿಯನ್ನು ಮನಗಂಡ ಕಾಂಗ್ರೆಸ್ ಸರ್ಕಾರ ಜನರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಸಮಾಜದಲ್ಲಿ ಸಾಮರಸ್ಯದ ಬದುಕು ನಿರ್ಮಿಸುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ. ಪ್ರತಿಯೊಬ್ಬರೂ ಸಮಾಜದಲ್ಲಿ ನೆಮ್ಮದಿಯ ಜೀವನ ನಡೆಸುವಂತಾಗಬೇಕು. ಜನರ ಸೇವೆಗೆ ಸರ್ಕಾರ ಸದಾ ಬದ್ಧವಾಗಿದೆ ಎಂದರು.
ವಿಧಾನ ಪರಿಷತ್ ಉಪ ಸಭಾಪತಿ ಡಾ. ಉಮಾಶ್ರೀ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕ್ರಾಂತಿಕಾರಕವಾಗಿದ್ದು, ಮಹಿಳೆಯರಿಗೆ ಸ್ವಾತಂತ್ರ್ಯ ಮತ್ತು ಸ್ವಾವಲಂಬನೆಯ ಶಕ್ತಿಯನ್ನು ನೀಡಿವೆ. 2023 ರಲ್ಲಿ ರಾಜ್ಯದ ಜನರ ಬದುಕಿಗೆ ಆಸರೆಯಾಗುವ ಅನಿವಾರ್ಯತೆ ಇತ್ತು. ಬಡವರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಅನ್ನಭಾಗ್ಯ ಯೋಜನೆ, ಜನರಿಗೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ವಿವಿಧ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಪಕ್ಷ, ಜಾತಿ, ಧರ್ಮದ ಭೇದವಿಲ್ಲದೆ ಎಲ್ಲ ಅರ್ಹ ಫಲಾನುಭವಿಗಳಿಗೂ ಈ ಯೋಜನೆಗಳ ಪ್ರಯೋಜನ ತಲುಪಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಚಿಂತಕ ಹಾಗೂ ವಾಗ್ಮಿ ಡಾ. ವಾಸು ದಿಕ್ಸೂಚಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ ನೂತನವಾಗಿ ಆಯ್ಕೆಯಾದ ಗ್ರಾಮ ಸಮಿತಿಗಳ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್. ರೇವಣ್ಣ, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಡಾ. ದೀಪಕ್ ತಿಮ್ಮಯ್ಯ, ಕರಾವಳಿ ಅಭಿವೃದ್ಧಿಯ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್, ಮುಖಂಡರಾದ ವಿನಯ್ ಕುಮಾರ್ ಸೊರಕೆ, ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ಗೋಪಾಲ ಪೂಜಾರಿ, ಜಯಪ್ರಕಾಶ್ ಹೆಗ್ಡೆ, ಕಿಶನ್ ಹೆಗ್ಡೆ ಕೊಳ್ಕೆಬೈಲು ಉಪಸ್ಥಿತರಿದ್ದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು.