ಸಿಇಟಿ ಪರೀಕ್ಷೆ ಹಾಗೂ ದ್ವೀತಿಯ ಪಿ.ಯು.ಸಿ ಪರೀಕ್ಷೆ -2 ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಸ್ವರೂಪಾ ಮಾತನಾಡಿದರು.
ಉಡುಪಿ: ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕಿನ 23 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 23 ಮತ್ತು 24 ರಂದು ಸಿಇಟಿ ಪರೀಕ್ಷೆಗಳು ನಡೆಯಲಿದ್ದು, 8746 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಪರೀಕ್ಷೆ ಹಾಗೂ ದ್ವೀತಿಯ ಪಿ.ಯು.ಸಿ ಪರೀಕ್ಷೆ -2 ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರವೇಶಾತಿ ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಪರೀಕ್ಷೆಯಲ್ಲಿ ಹಾಜರಾಗಿ ಗೊಂದಲಗಳಿಲ್ಲದ ಉಡುಪಿಯಲ್ಲಿ 11, ಕಾರ್ಕಳ 5 ಹಾಗೂ ಕುಂದಾಪುರದಲ್ಲಿ ತಲಾ 7 ಸೇರಿದಂತೆ ಒಟ್ಟು 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಗೊಂದಲವಾಗದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಪರೀಕ್ಷೆಗಳು ಆರಂಭವಾಗುವ ಎರಡೂವರೆ ಗಂಟೆ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್ಗಳು, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ, ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ಹಾಗೂ ಮುಂಜಾಗ್ರತೆಯಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಓ.ಆರ್.ಎಸ್ ಪ್ಯಾಕೇಟ್ ಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ದಾಸ್ತಾನು ಇಟ್ಟುಕೊಳ್ಳುವಂತೆ ತಿಳಿಸಿದರು.
ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾವನ್ನು ಕಡ್ಡಾಯವಾಗಿ ಅಳವಡಿಸಬೇಕು. ವೆಬ್ಕಾಸ್ಟಿಂಗ್ ಸಹ ನಡೆಯಲಿದೆ. ಸಿಇಟಿ ಪರೀಕ್ಷೆ ಕುರಿತ ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡಬೇಕು. ಖಜಾನೆಗಳಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎ.ಎಸ್.ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ ಮತ್ತಿತರರು ಉಪಸ್ಥಿತರಿದ್ದರು.