ಉಡುಪಿ: ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ವತಿಯಿಂದ ಅ. 17ರಂದು ಬೆಳಿಗ್ಗೆ 10.30ಕ್ಕೆ ಬ್ರಹ್ಮಾವರದ ಬಂಟರ ಭವನದ ಸಭಾಂಗಣದಲ್ಲಿ ಬ್ರಹ್ಮಾವರ ತಾಲೂಕು ಹಕ್ಕೊತ್ತಾಯ ಸಭೆ ನಡೆಯಲಿದೆ ಎಂದು ಹೋರಾಟ ಸಮಿತಿಯ ಸಂಚಾಲಕ ಹಾಗೂ ವಕೀಲ ಪ್ರೇಮ್ ಪ್ರಸಾದ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾವನೆಯಾಗಬೇಕೆಂಬ ಬೇಡಿಕೆಯನ್ನು ಪರಿಶೀಲಿಸಲು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೆ. 29ರಂದು ತ್ರಿಸದಸ್ಯ ನ್ಯಾಯಾಧೀಶರ ಸಮಿತಿಯನ್ನು ರಚಿಸಿರುವುದನ್ನು ಹೋರಾಟ ಸಮಿತಿ ಸ್ವಾಗತಿಸುತ್ತದೆ. ನ್ಯಾಯಮೂರ್ತಿ ಅನು ಶಿವರಾಮನ್, ನ್ಯಾಯಮೂರ್ತಿ ಎಸ್.ಜಿ. ವಂಡಿತ್ ಹಾಗೂ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರನ್ನು ಒಳಗೊಂಡ ಸಮಿತಿ ಬೇಡಿಕೆಯನ್ನು ಪರಿಶೀಲಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಉಡುಪಿ ಜಿಲ್ಲೆಯು ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಕೇಂದ್ರಸ್ಥಾನವಾಗಿದ್ದು, ನೆರೆಯ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವು ತಾಲೂಕುಗಳಿಗೂ ಸಮೀಪದಲ್ಲಿದೆ. ಹೀಗಾಗಿ, ಕರಾವಳಿ ಭಾಗಕ್ಕೆ ಉದ್ದೇಶಿತ ಸಂಚಾರಿ ಅಥವಾ ಶಾಶ್ವತ ಹೈಕೋರ್ಟ್ ಪೀಠವನ್ನು ಉಡುಪಿಯಲ್ಲೇ ಸ್ಥಾಪಿಸಬೇಕು ಎಂಬುದು ಸಮಿತಿಯ ಬಲವಾದ ಆಗ್ರಹವಾಗಿದೆ ಎಂದು ಹೇಳಿದರು.
ಪ್ರಾದೇಶಿಕ ಮಟ್ಟದಲ್ಲಿ ಹೈಕೋರ್ಟ್ ಪೀಠ ಕಾರ್ಯನಿರ್ವಹಿಸುವುದರಿಂದ ನ್ಯಾಯದಾನ ಪ್ರಕ್ರಿಯೆ ಜನರಿಗೆ ಇನ್ನು ಹತ್ತಿರವಾಗಲಿದೆ. ಅಲ್ಲದೆ, ಜಿಲ್ಲಾಡಳಿತ ಹಾಗೂ ಸ್ಥಳಿಯ ಆಡಳಿತ ವ್ಯವಸ್ಥೆಗಳು ಹೆಚ್ಚು ಜವಾಬ್ದಾರಿಯುತವಾಗಿ ಮತ್ತು ಚುರುಕಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ. ಭುಜಂಗ ಶೆಟ್ಟಿ, ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಕಾಡೂರು ಪ್ರವಿಣ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಶೇಖರ ಹಾವಂಜೆ, ಅಲ್ವಿನ್ ಅಂದ್ರಾದೆ ಉಪಸ್ಥಿತರಿದ್ದರು.