ಉಡುಪಿ: ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದ ಡಾ. ಅಂಬೇಡ್ಕರ್ ಅವರು ದೇಶದಲ್ಲಿದ್ದ ಮೌಢ್ಯ, ಜಾತಿ ಪದ್ಧತಿ, ಅಸ್ಪೃಶ್ಯತೆ ಹಾಗೂ ಅಸಮಾನತೆಯ ಅಂಧಕಾರ ಹೋಗಲಾಡಿಸಲು ಶ್ರಮಿಸಿದರು. ಸಂವಿಧಾನ ರಚಿಸುವ ಮೂಲಕ ದೇಶದಲ್ಲಿ ಸಮಾನತೆ ಮತ್ತು ಅಭಿವೃದ್ಧಿಗಾಗಿ ಭದ್ರ ಬುನಾದಿ ಹಾಕಿದರು ಎಂದು ರಂಗತಜ್ಞ ಡಾ.ಶ್ರೀಪಾದ್ ಭಟ್ ಹೇಳಿದರು.
ಉಡುಪಿ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ 'ಡಾ. ಬಿ.ಆರ್. ಅಂಬೇಡ್ಕರ್ ಓದು' ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಾಲ್ಯದಿಂದಲೂ ಸಮಾಜದಲ್ಲಿ ಅನೇಕ ತಾರತಮ್ಯ ಎದುರಿಸಿ ಛಲದೊಂದಿಗೆ ಶಿಕ್ಷಣ ಗಳಿಸಿದರು. ಶಿಕ್ಷಣದ ಮೂಲಕವೇ ದೇಶದಲ್ಲಿ ಅನೇಕ ಬದಲಾವಣೆ ತಂದರು. ನೊಂದವರಿಗೆ ಬೆಳಕಾಗಿದ್ದ ಅವರ ಬದುಕು ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಹಮೀದಾ ಬಾನು ಮಾತನಾಡಿ, ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿರುವ ಅಂಬೇಡ್ಕರ್ ಹಾಗೂ ಅವರ ಸಂವಿಧಾನದ ಕುರಿತು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು.
ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಸಂಚಾಲಕಿ ರತ್ನಮಾಲಾ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಮಾರುತಿ ವಂದಿಸಿದರು.
ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆ ಬೋಧಿಸಲಾಯಿತು.