ಕೋಟ: ಮಾಬುಕಳ ಸೀತಾನದಿಗೆ ದಂಪತಿ ಮೂಲತಃ ತುಮಕೂರಿನ ಶ್ರೀನಿವಾಸ್ ಮೂರ್ತಿ ಎಚ್.(52) ಹಾಗೂ ಗಂಗಾ(48) ಎಂಬುವರು ಜಿಗಿದು ಶನಿವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿ ಒಂದು ವಾರದ ಹಿಂದೆ ಕರಾವಳಿ ಹಾಗೂ ಮಲೆನಾಡು ಭಾಗದ ವಿವಿಧ ತೀರ್ಥಕ್ಷೇತ್ರಗಳ ದರ್ಶನಕ್ಕಾಗಿ ಆಗಮಿಸಿದ್ದರು ಎನ್ನಲಾಗಿದೆ.
ಶನಿವಾರ ಮುರ್ಡೇಶ್ವರಕ್ಕೆ ಭೇಟಿ ನೀಡಿದ್ದು, ಸಂಜೆ ಮಾಬುಕಳ ಪರಿಸರದಲ್ಲಿ ಸುತ್ತಾಡುತ್ತಿದ್ದರು. ರಾತ್ರಿ 10ರ ವೇಳೆಗೆ ಮಾಬುಕಳ ಸೇತುವೆಯಿಂದ ಸೀತಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿ ನದಿಗೆ ಹಾರಿರುವುದನ್ನು ಗಮನಿಸಿದ ರಿಕ್ಷಾ ಚಾಲಕರೊಬ್ಬರು ತಕ್ಷಣ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪರಿಶೀಲಿಸುವಷ್ಟರಲ್ಲಿ ಇಬ್ಬರೂ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ ಶೋಧ ನಡೆಸಿದರೂ ದಂಪತಿ ಪತ್ತೆಯಾಗಿರಲಿಲ್ಲ. ಭಾನುವಾರ ಬೆಳಗ್ಗೆ ಮಾಬುಕಳ ಸೇತುವೆಯಿಂದ 500 ಮೀಟರ್ ದೂರದ ಪಾಂಡೇಶ್ವರದ ಸೀತಾ ನದಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.
ಆತ್ಮಹತ್ಯೆಗೂ ಮುನ್ನ ದಂಪತಿ ಚೂಡಿದಾರದ ಶಾಲಿನಿಂದ ತಮ್ಮ ಕೈಗಳನ್ನು ಪರಸ್ಪರ ಕಟ್ಟಿಕೊಂಡಿದ್ದರು ಎನ್ನಲಾಗಿದ್ದು, ಅದೇ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಕೋಟ ಠಾಣಾ ಉಪನಿರೀಕ್ಷಕ ಪ್ರವೀಣ್ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.