ಸಾಂಪ್ರದಾಯಿಕ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮಾತನಾಡಿದರು.
ಉಡುಪಿ: ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ಸಾಂಪ್ರದಾಯಿಕ ಕಂಬಳಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ಕುರಿತು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲೆಯ ಸಾಂಪ್ರದಾಯಿಕ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಿಭಜಿತ ದ.ಕ. ಜಿಲ್ಲೆಯಲ್ಲಿ 100ಕ್ಕೂ ಅಧಿಕ ಸಾಂಪ್ರದಾಯಿಕ ಕಂಬಳಗಳಿವೆ. ಉಡುಪಿಯಲ್ಲಿ 60ಕ್ಕೂ ಹೆಚ್ಚು ಕಂಬಳಗಳನ್ನು ನಡೆಸಲಾಗುತ್ತಿದೆ. ಕರಾವಳಿ ಜಾನಪದ ಸಂಸತಿ ಉಳಿಯಬೇಕಾದರೆ ಹಾಗೂ ಕಂಬಳದ ಗತವೈಭವ ಮತ್ತೆ ಮರುಕಳಿಸಬೇಕಾದರೆ ಸರ್ಕಾರದಿಂದ ಹೆಚ್ಚಿನ ಅನುದಾನ ಅಗತ್ಯವಾಗಿದೆ ಎಂದರು.
ಮುಖ್ಯಮಂತ್ರಿಗಳು ಸಾಂಪ್ರದಾಯಿಕ ಕಂಬಳಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳಬೇಕು. ಕಂಬಳವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಸಹಕಾರ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲೆಯ ಸಾಂಪ್ರದಾಯಿಕ ಕಂಬಳ ಸಮಿತಿ ಅಧ್ಯಕ್ಷ ಸುಧಾಕರ್ ಹೆಗ್ಡೆ, ಕಾರ್ಯಕಾರಿ ಸಮಿತಿ ಸದಸ್ಯ ಅಭಿಜಿತ್ ಪಾಂಡೇಶ್ವರ ಮೊದಲಾದವರು ಉಪಸ್ಥಿತರಿದ್ದರು.