ಮಂಗಳೂರು ವಿವಿಯಲ್ಲಿ ಎದುರಾಗಿರುವ ಶೈಕ್ಷಣಿಕ, ಆಡಳಿತಾತ್ಮಕ ಹಾಗೂ ಮೂಲ ಸೌಕರ್ಯಗಳ ಸಮಸ್ಯೆಗಳ ವಿರುದ್ಧ ವಿವಿ ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಬುಧವಾರ ವಿವಿಯ ಆಡಳಿತ ಸೌಧದ ಬಳಿ ಪ್ರತಿಭಟನೆ ನಡೆಸಿದರು.
ಉಳ್ಳಾಲ: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಎದುರಾಗಿರುವ ಶೈಕ್ಷಣಿಕ, ಆಡಳಿತಾತ್ಮಕ ಹಾಗೂ ಮೂಲ ಸೌಕರ್ಯಗಳ ಸಮಸ್ಯೆಗಳ ವಿರುದ್ಧ ವಿವಿ ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಬುಧವಾರ ವಿವಿಯ ಆಡಳಿತ ಸೌಧದ ಬಳಿ ಪ್ರತಿಭಟನೆ ನಡೆಸಿದರು.
ವಿವಿಗೆ ಸರ್ಕಾರದಿಂದ ಬರಬೇಕಿರುವ ಅನುದಾನ ತಕ್ಷಣ ಬಿಡುಗಡೆಗೊಳಿಸಬೇಕು, ಖಾಲಿಯಿರುವ ಹುದ್ದೆಗಳಿಗೆ ಪೂರ್ಣಕಾಲಿಕ ಉಪನ್ಯಾಸಕರನ್ನು ನೇಮಿಸಬೇಕು. ಪರೀಕ್ಷಾ ಶುಲ್ಕ ಹೆಚ್ಚಳ ಹಿಂಪಡೆದು 2023ರ ವ್ಯವಸ್ಥೆ ಮುಂದುವರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ವಿವಿಯಲ್ಲಿರುವ ವಿಭಾಗಗಳಿಗೆ ಅಗತ್ಯವಿರುವ ಲ್ಯಾಬ್ ರಾಸಾಯನಿಕಗಳು, ಉಪಕರಣ, ಕ್ರೀಡಾ ಸಾಮಗ್ರಿ, ಗ್ರಂಥಾಲಯ ಹಾಗೂ ಕಂಪ್ಯೂಟರ್ ಲ್ಯಾಬ್‌ಗಳನ್ನು ತಕ್ಷಣ ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿನಿಲಯಗಳಲ್ಲಿ ಮೂಲ ಸೌಕರ್ಯಗಳ ಕೊರತೆ, ನಿರ್ವಹಣಾ ಸಮಸ್ಯೆ ಹಾಗೂ ಸಮರ್ಪಕ ಗ್ಯಾಸ್ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಡಿಜಿ ಲಾಕರ್ ಮೂಲಕ ಅಂಕಪಟ್ಟಿ ನೀಡುವ ಹಿನ್ನೆಲೆಯಲ್ಲಿ ಭೌತಿಕ ಅಂಕಪಟ್ಟಿಗೆ ಸಂಗ್ರಹಿಸಿದ ಶುಲ್ಕವನ್ನು ಮರುಪಾವತಿಸಬೇಕು. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ವಸೂಲಿ ನಿಲ್ಲಿಸಿ, ಅವರಿಗೆ ಮಂಜೂರಾದ ವಿದ್ಯಾರ್ಥಿವೇತನದ ಮೊತ್ತವನ್ನು ಶುಲ್ಕವಾಗಿ ಪರಿಗಣಿಸಬೇಕು. ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಸಂಶೋಧನಾ ವಿದ್ಯಾರ್ಥಿಗಳ ಫೆಲೋಶಿಪ್ ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಕುಲಪತಿಗಳಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಕುಲಪತಿ ಪ್ರೊ.ಎಲ್.ಧರ್ಮ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು.