ಉಡುಪಿ: ವಿದ್ಯಾರ್ಥಿಗಳು ಕಾಲದ ಬದಲಾವಣೆಯನ್ನು ಅರ್ಥೈಸಿಕೊಂಡು, ಕೇವಲ ಅಕ್ಷರಸ್ಥರಾಗುವುದಕ್ಕೆ ಸೀಮಿತವಾಗದೆ ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಅಪ್ರತಿಮರಾಗಿ ಬೆಳೆಯಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು.
ಪುರಭವನದಲ್ಲಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ವಿತರಣೆ, ಡೈರಿ ಬಿಡುಗಡೆ ಹಾಗೂ ಸಹಕಾರ ಕ್ಷೇತ್ರದ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸ್ವಾತಂತ್ರ್ಯ ಪೂರ್ವದಲ್ಲಿ ಸುಮಾರು ಶೇ. 12ರಷ್ಟಿದ್ದ ಅಕ್ಷರಸ್ಥರ ಪ್ರಮಾಣ ಈಗ ಶೇ. 90ಕ್ಕಿಂತ ಹೆಚ್ಚಾಗಿರುವುದು ಸಂತೋಷದ ಸಂಗತಿ. ಹಿಂದೆ 10ನೇ ತರಗತಿ ಫಲಿತಾಂಶದಲ್ಲಿ ಶೇ. 40ರಿಂದ 45ರಷ್ಟು ಉತ್ತೀರ್ಣತೆ ದಾಖಲಾಗುತ್ತಿತ್ತು. ಈಗ ಶೇ. 95ಕ್ಕಿಂತ ಹೆಚ್ಚಿನ ಅಂಕ ಗಳಿಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಬುದ್ಧಿವಂತಿಕೆ ಇದ್ದರೆ ಸಾಲದು ಅದಕ್ಕೆ ತಕ್ಕಂತೆ ಪರಿಶ್ರಮವೂ ಅಗತ್ಯ. ಭಾರತದಲ್ಲಿ 25 ವರ್ಷದೊಳಗಿನ 52 ಕೋಟಿ ಯುವಕರು ದೇಶದ ದೊಡ್ಡ ಶಕ್ತಿ ಮತ್ತು ಸೌಭಾಗ್ಯ. ವಿದ್ಯಾರ್ಥಿಗಳು ದಾನಿಗಳ ನೆರವು ಸಮರ್ಥವಾಗಿ ಬಳಸಿಕೊಂಡು ಯಶಸ್ವಿಯಾದರೆ ದಾನ ನೀಡಿದವರಿಗೂ ನೆಮ್ಮದಿ ದೊರೆಯುತ್ತದೆ ಎಂದರು.
ಬ್ಯಾಂಕಿನ ಅಧ್ಯಕ್ಷ ಹಾಗೂ ಶಾಸಕ ಯಶ್ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಿ, ಸುಮಾರು 50 ಲಕ್ಷ ವೆಚ್ಚದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಸಾಧನೆಯ ಮೂಲಕ ವಿಕಸಿತ ಭಾರತ ನಿಮಾರ್ಣಕ್ಕೆ ಕೊಡುಗೆ ನೀಡುವಂತಾಗಲಿ ಎಂದು ಹೇಳಿದರು.
ನಾಡೋಜ ಡಾ. ಜಿ. ಶಂಕರ್ ಸಮಾರಂಭ ಉದ್ಘಾಟಿಸಿದರು. ಗೀತಾನಂದ ಫೌಂಡೇಶನ್ ಅಧ್ಯಕ್ಷರಾದ ಆನಂದ ಸಿ. ಕುಂದರ್ ನೂತನ ಡೈರಿ ಬಿಡುಗಡೆ ಮಾಡಿದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಶುಭ ಹಾರೈಸಿದರು.
ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.
ಸಮಾರಂಭದಲ್ಲಿ ಉದ್ಯಮಿ ಆನಂದ ಪಿ. ಸುವರ್ಣ, ಬ್ಯಾಂಕಿನ ಉಪಾಧ್ಯಕ್ಷ ವಾಸುದೇವ ಸಾಲ್ಯಾನ್, ವ್ಯವಸ್ಥಾಪಕ ನಿರ್ದೇಶಕ ಶರತ್ ಕುಮಾರ್ ಶೆಟ್ಟಿ ಎನ್., ಸಹಾಯಕ ಪ್ರಧಾನ ವ್ಯವಸ್ಥಾಪಕಿ ಶಾರಿಕಾ ಕಿರಣ್, ಎಜಿಎಂ ಆನಂದ ಸೆಲ್ವಂ ಉಪಸ್ಥಿತರಿದ್ದರು. ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಹಾಗೂ ಬ್ಯಾಂಕಿನ ಸಿಬ್ಬಂದಿ ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.