ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿದರು.
ಉಡುಪಿ: ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸವೋರ್ಚ್ಚ ನ್ಯಾಯಾಲಯ ಹೊರಡಿಸಿರುವ ಆದೇಶದಲ್ಲಿರುವ ಮಾರ್ಗಸೂಚಿಗಳನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿ ಅನುಷ್ಠಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರ ಪ್ರದೇಶದಲ್ಲಿ 7197 ಹಾಗೂ ಗ್ರಾಮೀಣ ಭಾಗದಲ್ಲಿ 13,185 ಸೇರಿದಂತೆ ಸುಮಾರು 20,382 ಬೀದಿನಾಯಿಗಳನ್ನು ಗುರುತಿಸಲಾಗಿದೆ. ಸರ್ಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಸರ್ಕಾರಿ ಕಚೇರಿಗಳು, ಬಸ್ ಹಾಗೂ ರೈಲ್ವೆ ನಿಲ್ದಾಣ, ಆಸ್ಪತ್ರೆಗಳು ಹಾಗೂ ಕ್ರೀಡಾಂಗಣ ಸೇರಿದಂತೆ ಒಟ್ಟು 253 ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಟ್ಟು 446 ಬೀದಿನಾಯಿಗಳನ್ನು ಗುರುತಿಸಲಾಗಿದೆ. ಪ್ರತಿ ನಗರ ಸ್ಥಳಿಯ ಸಂಸ್ಥೆಗಳಲ್ಲಿಯೂ ಬೀದಿ ನಾಯಿಗಳ ಉಪಟಳ ತಡೆಯಲು ನೇಮಕ ಮಾಡಲಾದ ನೋಡೆಲ್ ಅಧಿಕಾರಿಗಳು ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದರು.
ಬೀದಿನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಬಿಡಲು ಅನುಕೂಲವಾಗುವಂತೆ ಉಡುಪಿ ನಗರಸಭೆ, ಕುಂದಾಪುರ, ಕಾರ್ಕಳ ಹಾಗೂ ಕಾಪು ಪುರಸಭೆ, ಬೈಂದೂರು ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 11.91 ಎಕರೆ ಜಮೀನು ಮಂಜೂರು ಮಾಡಿದ್ದು, 33.93 ಲಕ್ಷ ಕ್ರಿಯಾ ಯೋಜನೆ ತಯಾರಿಸಲಾಗುವುದು ಎಂದು ತಿಳಿಸಿದರು.
ಪ್ರತಿ ವಾರ್ಡ್ ಹಾಗೂ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಗೆ ಅನುಗುಣವಾಗಿ ಆಹಾರ ವಿತರಣೆಗೆ ಸ್ಥಳಗಳನ್ನು ಗುರುತಿಸಿ, ನಾಮಫಲಕ ಅಳವಡಿಸಬೇಕು. ಆಹಾರ ವಿತರಣಾ ತಾಣಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ಪೂರೈಕೆ ಮಾಡದಲ್ಲಿ ಅಂತಹವ ವಿರುದ್ಧ ಎಫ್.ಐ.ಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಸಂತಾನಹರಣ ಶಸ್ತ್ರ ಚಿಕಿತ್ಸೆ, ಎ.ಆರ್.ವಿ ಲಸಿಕೆ ನೀಡಬೇಕು. ಶ್ವಾನ ಪ್ರದರ್ಶನ, ದತ್ತು ಸ್ವೀಕಾರ ಕಾರ್ಯಕ್ರಮ ಏರ್ಪಡಿಸಿ ಸಾರ್ವಜನಿಕರು ದತ್ತು ಪಡೆಯುವಂತೆ ಪ್ರೇರೇಪಿಸಬೇಕು ಎಂದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಪಶುಪಾಲನಾ ಮತ್ತು ಪಶು ವೈದ್ಯಕಿಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಎಂ.ಸಿ. ರೆಡ್ಡಪ್ಪ, ಪಶುವೈದ್ಯಕಿಯ ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ. ಬಾಬಣ್ಣ ಮತ್ತಿತರರು ಉಪಸ್ಥಿತರಿದ್ದರು.