ಉಡುಪಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮುಖ್ಯ ಶಿಕ್ಷಕರ ಸಭೆಯನ್ನು ಸ್ವರೂಪಾ ಟಿ.ಕೆ. ಉದ್ಘಾಟಿಸಿದರು. ಪ್ರತೀಕ್ ಬಾಯಲ್, ಮಾರುತಿ, ಹಾಕಪ್ಪ ಆರ್. ಲಮಾಣಿ, ಲೋಕೇಶ್ ಸಿ., ಡಾ. ಅಶೋಕ್ ಕಾಮತ್, ಕಿರಣ್ ಹೆಗ್ಡೆ ಇದ್ದರು.
* ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸಲಹೆ
* ಡಿಸಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಮುಖ್ಯ ಶಿಕ್ಷಕರ ಸಭೆ
* ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳಕ್ಕೆ ಕ್ರಮ
ಉಡುಪಿ: ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಉಡುಪಿ ಜಿಲ್ಲೆಯು ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿಯೂ ಸಹ ಶೇಕಡ ನೂರು ಫಲಿತಾಂಶ ಗಳಿಸಬೇಕು. ಆ ಸಾಧನೆ ಮುಂದುವರಿಸಿ ಜಿಲ್ಲೆಗೆ ಕೀರ್ತಿ ತರುವಂತಾಗಬೇಕು. ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಮೂಡಿಸುವುದರೊಂದಿಗೆ ಅವರು ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಮಾಡುವುದು ಎಲ್ಲ ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸಲಹೆ ನೀಡಿದರು.
ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ವೃದ್ಧಿಗಾಗಿ ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಜಿಲ್ಲೆ ಮತ್ತು ಮುಖ್ಯ ಶಿಕ್ಷಕರ ಸಂಘ ಉಡುಪಿ ಆಶ್ರಯದಲ್ಲಿ ಶನಿವಾರ (ಫೆ.7) ಆಯೋಜಿಸಿದ್ದ ಜಿಲ್ಲಾ ಮಟ್ಟದ ಮುಖ್ಯ ಶಿಕ್ಷಕರ ಸಭೆ ಉದ್ಘಾಟಿಸಿ ಮಾತನಾಡಿದರು.
ಹಿಂದುಳಿದ ಮಕ್ಕಳಿಗೆ ನೀಡಿ ಆದ್ಯತೆ
ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳಕ್ಕಾಗಿ ಶಿಕ್ಷಣ ಇಲಾಖೆ ಅಳವಡಿಸಿರುವ ವಿನೂತನ ಕಾರ್ಯಕ್ರಮಗಳಿಗೆ ಮಕ್ಕಳು ಸಾಕಾರಾತ್ಮಕವಾಗಿ ಸ್ಪಂದಿಸುವಂತೆ ಶಿಕ್ಷಕರು ನೋಡಿಕೊಳ್ಳಬೇಕು. ಕಷ್ಟಕರ ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಒಲವು ಮೂಡಿಸಬೇಕು. ಪರೀಕ್ಷೆಗೆ ಹೇಗೆ ತಯಾರಿ ನಡೆಸಬೇಕು? ಮಾದರಿ ಪ್ರಶ್ನೆ ಪತ್ರಿಕೆ ಬಿಡಿಸಿ ವಿವರಿಸಬೇಕು. ಕಲಿಕಾ ವಿಧಾನ ಹೇಗೆ ಎಂಬಿತ್ಯಾದಿ ಬಗ್ಗೆ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ತಿಳಿಹೇಳಬೇಕು. ಅವರ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸುತ್ತಾರೆ. ಹೀಗಾಗಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಒತ್ತು ನೀಡಬೇಕು. ಅಂತಹ ವಿದ್ಯಾರ್ಥಿಗಳ ಪಟ್ಟಿ ಮಾಡಿ ವಿಶೇಷ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲೆಗೆ ಮೊದಲ ಸ್ಥಾನ
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ. ಮಾತನಾಡಿ, ರಾಜ್ಯದ ಗುಣಾತ್ಮಕ ಶಿಕ್ಷಣ ವ್ಯವಸ್ಥೆಯ ಟಾಪ್ ಐದು ಎ ಗ್ರೇಡ್ನಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನ ಗಳಿಸಿದೆ. ಅದನ್ನು ಮುಂದುವರಿಸಿಕೊಂಡು ಹೋಗುವುದು ಎಲ್ಲ ಶಿಕ್ಷಕರ ಹೊಣೆಯಾಗಿದೆ. ಯಾವುದೇ ವಿದ್ಯಾರ್ಥಿ ಶಾಲೆಯಿಂದ ದೂರವಿರದಂತೆ ನೋಡಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ, ಅವರೊಂದಿಗೇ ಇದ್ದು, ಫಲಿತಾಂಶ ಹೆಚ್ಚಿಸಲು ಪ್ರಯತ್ನಿಸಬೇಕು ಎಂದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಆರ್. ಲಮಾಣಿ, ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ಐದು ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿಕ್ಷಕ ರಾಜೇಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ಅಕ್ಷರ ದಾಸೋಹ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಾ ನಾಯಕ್ ವಂದಿಸಿದರು.
ವಿದ್ಯಾರ್ಥಿಗಳಲ್ಲಿ ನಾಗರಿಕ ಪ್ರಜ್ಞೆ ಬೆಳೆಸಬೇಕು. ಅವರಲ್ಲಿ ಆತ್ಮವಿಶ್ವಾಸ ವೃದ್ಧಿಸುವುದರಿಂದ ಶೇ.100 ಫಲಿತಾಂಶ ಪಡೆಯಲು ಸಾಧ್ಯ. ಪ್ರತಿ ವಿದ್ಯಾರ್ಥಿಯೂ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಮುಖ್ಯವಲ್ಲ. ವಿಶೇಷ ದರ್ಜೆಯಲ್ಲಿ ಉತ್ತೀರ್ಣರಾಗುವುದು ಮುಖ್ಯವಾಗಿರುತ್ತದೆ.