ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆಯಾದ ಡಾ. ಕೆ.ಎಂ. ರಾವ ನಂಬಿಯಾರ್.
* ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಂ ಶೆಟ್ಟಿ ಮಾಹಿತಿ
ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗಾನದ ಸಂಶೋಧಕ, ಪ್ರಸಂಗಕರ್ತ ಹಾಗೂ ಭಾಗವತರೂ ಆದ ಉಡುಪಿ ಇಂದ್ರಾಳಿಯ ಡಾ. ಕೆ.ಎಂ. ರಾವ ನಂಬಿಯಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಂ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಪ್ರಶಸ್ತಿಯು 1 ಲಕ್ಷ ರೂ. ನಗದು, ಪ್ರಶಸ್ತಿ ಫಲಕ ಹಾಗೂ ಪ್ರಮಾಣ ಪತ್ರ ಒಳಗೊಂಡಿದೆ. ಮೇ 3ರಂದು ಅಂಬಲಪಾಡಿಯಲ್ಲಿರುವ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿರುವ 2025ನೇ ಸಾಲಿನ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ನಂಬಿಯಾರ್ ಅವರನ್ನು ಸನ್ಮಾನಿಸಲಾಗುವುದು ಎಂದು ಅಕಾಡೆಮಿಯ ರಜಿಸ್ಟ್ರಾರ್ ನಮೃತಾ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.