ಉಡುಪಿ: ಡ್ರಗ್ಸ್ ಸಾಗಾಟ, ಮಾರಾಟ ಹಾಗೂ ಸೇವನೆಗೆ ಸಂಬಂಧಿಸಿದಂತೆ ಸರಣಿ ಪ್ರಕರಣ ಎದುರಿಸುತ್ತಿರುವ ಆರೋಪಿ ವಿರುದ್ಧ ಪೊಲೀಸರು ಪಿ.ಐ.ಟಿ. ಎನ್.ಡಿ.ಪಿ.ಎಸ್ ಕಾಯ್ದೆಯಡಿ ಕೇಸ್ ದಾಖಲಿಸಿ ಬಂಧಿಸಿದ್ದಾರೆ.
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಬಂಧಿತ ಆರೋಪಿ.
ಬಂಧಿತ ಆರೋಪಿ ಇಕ್ಬಾಲ್ ಶೇಖ್ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಹಲವು ಮಾದಕ ದ್ರವ್ಯ ಪ್ರಕರಣಗಳು ದಾಖಲಾಗಿವೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ 3 ಪ್ರಕರಣ ಹಾಗೂ ಸೇವನೆಗೆ ಸಂಬಂಧಿಸಿ 1 ಪ್ರಕರಣ, ನಗರ ಪೊಲೀಸ್ ಠಾಣೆಯಲ್ಲಿ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿ 2 ಪ್ರಕರಣ ಹಾಗೂ ಸೇವನೆಗೆ ಸಂಬಂಧಿಸಿ 1 ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ದಾಖಲಾಗಿರುವ 5 ಸಾಗಾಟ ಮತ್ತು ಮಾರಾಟ ಪ್ರಕರಣಗಳು ಪ್ರಸ್ತುತ ನ್ಯಾಯಾಲಯದ ವಿಚಾರಣೆಯಲ್ಲಿದೆ. 2 ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಯಾಗಿದೆ.
ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ರವಾನೆ
ಆರೋಪಿ ನಿರಂತರ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ನೀಡಿದ ವರದಿ ಆಧರಿಸಿ, ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಬಂಧನ ಆದೇಶ ಹೊರಡಿಸಿದ್ದರು. ಅದರಂತೆ ಆತನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂದಿಸಲಾಗಿದ್ದು ಕಲಬುರ್ಗಿ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.