ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಹೊಸ ವಿದ್ಯಾರ್ಥಿಗಳ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿದರು.  
ಉಡುಪಿ

ವಿದ್ಯಾರ್ಥಿ ಜೀವನ ಚಿನ್ನದ ಗಣಿ: ಡಾ. ವಿರೂಪಾಕ್ಷ ದೇವರಮನೆ

ಗೋಪಾಲಕೃಷ್ಣ ಪಾದೂರ್
ಉಡುಪಿ: ವಿದ್ಯಾರ್ಥಿ ಜೀವನ ಚಿನ್ನದ ಗಣಿ. ಈ ಹಂತದಲ್ಲಿ ಅವಕಾಶಗಳ ಮಹಾಪೂರವೇ ಬರುತ್ತದೆ. ಇವುಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಹೇಳಿದರು.
ಸೋಮವಾರ ಪುರಭವನದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪದವಿ ಕೋರ್ಸ್​ಗಳಿಗೆ ಪ್ರವೇಶ ಪಡೆದ ಹೊಸ ವಿದ್ಯಾರ್ಥಿಗಳ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಯೌವ್ವನದಲ್ಲಿ ಭಾವನೆಗಳನ್ನು ನಿಯಂತ್ರಿಸುವ ಕೌಶಲ ಬೆಳೆಸಿಕೊಳ್ಳಬೇಕು. ಹತಾಶೆ, ತಿರಸ್ಕಾರ ಹಾಗೂ ಕೀಳರಿಮೆ ದೂರ ಮಾಡಿಕೊಳ್ಳಬೇಕು. ಸ್ನೇಹಿತರ ಒತ್ತಡಕ್ಕೆ ಒಳಗಾಗಿ ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು. ಪೋಷಕರೊಂದಿಗೆ ಆತ್ಮೀಯ ಸಂಬಂಧವನ್ನು ಹೊಂದಿರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳು ಸಾಮರ್ಥ್ಯಗಳು ಹಾಗೂ ದೌರ್ಬಲ್ಯಗಳನ್ನು ಅರಿತುಕೊಳ್ಳಬೇಕು. ಮಾನಸಿಕ ಆರೋಗ್ಯವೂ ದೈಹಿಕ ಆರೋಗ್ಯದಷ್ಟೇ ಮುಖ್ಯ. ಒಂಟಿತನ, ಖಿನ್ನತೆ ಸೇರಿದಂತೆ ಯಾವುದೇ ಮಾನಸಿಕ ಸಮಸ್ಯೆ ಎದುರಾದಲ್ಲಿ ಮುಕ್ತವಾಗಿ ಹಂಚಿಕೊಳ್ಳಬಹುದು. ಅಗತ್ಯವಿದ್ದಲ್ಲಿ 14416 ಸಹಾಯವಾಣಿಗೆ ಕರೆ ಮಾಡಿ ನೆರವು ಪಡೆಯಬಹುದು ಎಂದು ಸಲಹೆ ನೀಡಿದರು.
ಉಡುಪಿ ಲೀಡ್​ ಬ್ಯಾಂಕ್​ ಅಧ್ಯಕ್ಷ ಹರೀಶ್​ ಕುಮಾರ್​ ಮಾತನಾಡಿ, ವಿದ್ಯಾರ್ಥಿಗಳು ಆರ್ಥಿಕ ಸಾಕ್ಷರತೆಯನ್ನು ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಮೈಗೂಡಿಸಿಕೊಂಡು ಕಾಲೇಜಿನ ಘನತೆಯನ್ನು ಕಾಪಾಡಬೇಕು. ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಜ್ಞಾನ ಹಾಗೂ ಕೌಶಲಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣ ಭಟ್​ ಉಪಸ್ಥಿತರಿದ್ದರು. ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಾಜೇಂದ್ರ ಕೆ. ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಪುರುಷೋತ್ತಮ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಶರತ್​ ಕುಮಾರ್​ ವಂದಿಸಿದರು.