ವಿಜಯವಾಣಿ ಸುದ್ದಿಜಾಲ ಕಾಸರಗೋಡು
ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆ ಮತ್ತು ಭಾರತೀಯ ಹವಾಮಾನ ಇಲಾಖೆಯು ’ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅವರು ವೃತ್ತಿಪರ ಕಾಲೇಜುಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಆಗಸ್ಟ್ 4ರಂದು ರಜೆ ಘೋಷಿಸಿದ್ದಾರೆ.
ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ಬೋಧನಾ ಕೇಂದ್ರಗಳು, ಐಸಿಎಸ್‌ಇ ಮತ್ತು ಸಿಬಿಎಸ್‌ಇ ಶಾಲೆಗಳು ಹಾಗೂ ಕೇಂದ್ರೀಯ ವಿದ್ಯಾಲಯಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಮದರಸಾಗಳಂತಹ ಧಾರ್ಮಿಕ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯಿಸಲಿದೆ.
ಪೂರ್ವನಿಗದಿತ ವಿಶ್ವವಿದ್ಯಾಲಯ ಅಥವಾ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.