ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ 200ನೇ ಗ್ರಂಥಾಲಯ ಉದ್ಘಾಟಿಸಿದರು.
ಉಡುಪಿ: ಇಂದಿನ ಆಧುನಿಕ ಯುಗದಲ್ಲಿ ಮೊಬೈಲ್ ಬಳಕೆ ವ್ಯಾಪಕವಾಗಿ ಬೆಳೆಯುತ್ತಿದ್ದು, ಪುಸ್ತಕ ಸಂಸತಿ ಮರೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮೊಬೈಲ್ ವ್ಯಾಮೋಹವನ್ನು ಸ್ವಲ್ಪ ಬದಿಗಿಟ್ಟು, ಪುಸ್ತಕಗಳ ಕಡೆಗೆ ಮುಖ ಮಾಡಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮ ಪ್ರೇರಣಾದಾಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾದ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ 200ನೇ ಗ್ರಂಥಾಲಯ ಉದ್ಘಾಟಿಸಿ ಅವರು ಮಾತನಾಡಿದರು.
ಕಚೇರಿಗೆ ಬರುವವರಿಗೆ ಓದಿನ ಪ್ರೇರಣೆ
ಸರ್ಕಾರಿ ಕಚೇರಿಗಳಲ್ಲಿ ಇಂತಹ ಗ್ರಂಥಾಲಯ ಸ್ಥಾಪನೆಯಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಕಚೇರಿಗೆ ವಿವಿಧ ಕೆಲಸ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರಿಗೆ ಕಡ್ಡಾಯವಾಗಿ ಪುಸ್ತಕ ಓದುವಂತೆ ಪ್ರೇರೇಪಿಸಬೇಕು. ಪುಸ್ತಕಗಳನ್ನು ಓದುವುದರ ಮೂಲಕ ಪ್ರತಿಯೊಬ್ಬರೂ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳುವುದರ ಜೊತೆಗೆ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಗಾಂಧಿ ಆಸ್ಪತ್ರೆಯ ಮುಖ್ಯಸ್ಥ ಡಾ. ಹರೀಶ್ಚಂದ್ರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ ಶೆಣೈ, ಸುಹಾಸಂ ಅಧ್ಯಕ್ಷೆ ಸಂಧ್ಯಾ ಶೆಣೈ, ಕಾರ್ಯದರ್ಶಿ ಮುರಳೀಧರ್, ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಪದಾಧಿಕಾರಿಗಳಾದ ಆರ್. ವಸಂತ್, ದೀಪಾ ಚಂದ್ರಕಾಂತ್, ಸಿದ್ದಬಸಯ್ಯಸ್ವಾಮಿ ಚಿಕ್ಕಮಠ, ಚಂದ್ರಕಾಂತ್ ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ ಪ್ರಸ್ತಾವನೆಗೈದರು. ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.