ಬೈಂದೂರು: ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ನಡೆಸಿ ಸರ್ಕಾರಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಡುಪಿ ಜಿಲ್ಲಾ ಭೂವಿಜ್ಞಾನಿ ಕುವಾರ್ ಬಿ. ಅವರು ಪೊಲೀಸ್ ಸಿಬ್ಬಂದಿ ಸಹಕಾರದೊಂದಿಗೆ ಬ್ಯಾಟಿಯಾಣಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಅಕ್ರಮ ಗಣಿಗಾರಿಕೆ ನಡೆದಿರುವುದು ಪತ್ತೆಯಾಗಿದೆ.
ಆರೋಪಿಗಳು 294 ಮೆಟ್ರಿಕ್ ಟನ್ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ತೆಗೆದು ಸಾಗಿಸಿರುವುದು ಕಂಡುಬಂದಿದೆ. ಇದರಿಂದ ಸರ್ಕಾರಕ್ಕೆ 4,65,405 ರೂ. ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಕ್ರಮ ಗಣಿಗಾರಿಕೆಗೆ ಬಳಸಿದ್ದ ಒಂದು ಟಿಲ್ಲರ್ ಯಂತ್ರ, ಎರಡು ಕಲ್ಲು ಎತ್ತುವ ಟ್ರಾಲಿಗಳು ಹಾಗೂ ಕಲ್ಲು ಸಾಗಾಟಕ್ಕೆ ಬಳಸಲು ನಿಲ್ಲಿಸಲಾಗಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.