ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟವನ್ನು ಶಾಸಕ ಯಶ್ಪಾಲ್ ಎ. ಸುವರ್ಣ ಉದ್ಘಾಟಿಸಿದರು.
ಉಡುಪಿ: ಕ್ರೀಡಾಪಟುಗಳು ದೇಶದ ಬಹು ದೊಡ್ಡ ಆಸ್ತಿ. ಇವರ ಯೋಗದಾನವನ್ನು ನಾವು ಹಲವು ಕ್ಷೇತ್ರಗಳಲ್ಲಿ ಕಾಣಬಹುದಾಗಿದೆ. ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಉತ್ತಮ ಅವಕಾಶಗಳು ಲಭ್ಯವಿದ್ದು, ಇದರ ಪ್ರಯೋಜನ ನಾಡಿನ ಸಮಸ್ತ ಕ್ರೀಡಾಳುಗಳಿಗೆ, ಕ್ರೀಡಾ ಆಸಕ್ತರಿಗೆ ಸಿಗುವಂತಾಗಬೇಕು ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.
ಮಂಗಳವಾರ ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ಮತ್ತು ಅಜ್ಜರಕಾಡು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಆಶ್ರಯದಲ್ಲಿ ಜಿಲ್ಲಾ ಮಹಾತ್ಮ ಗಾಂಧೀಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಮಂಗಳೂರು ವಿವಿ ಕ್ರೀಡಾ ವಿಭಾಗದ ಜಂಟಿ ನಿರ್ದೇಶಕಿ ಪ್ರೊ. ಕೆ.ಆರ್. ಕವಿತಾ ಮಾತನಾಡಿ ಕ್ರೀಡೆಯಲ್ಲಿ ಶಿಸ್ತು ಬಹಳ ಮುಖ್ಯ. ಕ್ರೀಡಾಳುಗಳು ಸೋಲು ಮತ್ತು ಗೆಲುವನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಿದರೆ ಮಾತ್ರ ಕ್ರೀಡೆ ಜಯಗಳಿಸುತ್ತದೆ ಎಂದರು.
ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕಲಪತಿಗಳಾಗಿ ಸೇವೆಯನ್ನು ಸಲ್ಲಿಸಿ ಇತ್ತೀಚೆಗೆ ನಿಧನರಾದ ಪ್ರೊ. ಕಿಶೋರ್ ಕುಮಾರ್ ಸಿ. ಕೆ ಅವರ ಸ್ಮರಣಾರ್ಥ ಬೆಳ್ಳಿಯ ಚಾಂಪಿಯನ್ಸ್ ಟ್ರೋಫಿಯನ್ನು ಅನಾವರಣ ಮಾಡಲಾಯಿತು. ಅಮೆಚೂರ್ ಅಥ್ಲೆಟಿಕ್ ಅಸೋಶಿಯೇಶನ್ನ ಅಧ್ಯಕ್ಷ ಹರಿಪ್ರಸಾದ್ ರೈ ಪಥಸಂಚಲನ ಮತ್ತು ಧ್ವಜವಂದನೆ ಸ್ವೀಕರಿಸಿದರು. ವಿದ್ಯಾರ್ಥಿನಿ ಪ್ರಗತಿ ಕ್ರೀಡಾ ಪ್ರತಿಜ್ಞವಿಧಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಸೋಜನ್ ಕೆ. ಜಿ ವಹಿಸಿದ್ದರು.
ಅರುಣ ಕಿಶೋರ್ ಕುಮಾರ್, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜ, ಯುವ ಸವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಸ್ವಾಗತಿಸಿದರು. ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಪ್ರವಿಣ್ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಪ್ರೊ. ನಿಕೇತನ ವಂದಿಸಿದರು.
ಸ್ಪರ್ಧೆಯಲ್ಲಿ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ, ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ದ್ವೀತಿಯ ಮತ್ತು ಪೂರ್ಣಪ್ರಜ್ಞ ಕಾಲೇಜು ತೃತೀಯ ಬಹುಮಾನವನ್ನು ಪಡೆಯಿತು.