ಉಡುಪಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಉಡುಪಿ ಮತ್ತು ಬ್ರಹ್ಮಾವರ ತಾಲೂಕಿನ ದಸರಾ ಕ್ರೀಡಾಕೂಟವನ್ನು ಯಶ್ಪಾಲ್ ಸುವರ್ಣ ಉದ್ಘಾಟಿಸಿದರು. ಎಂ.ಎ. ಗಪೂರ್, ದಿನಕರ್ ಶೆಟ್ಟಿ ಹೇರೂರು, ರಮೇಶ್ ಕಾಂಚನ್, ಡಾ. ರೋಶನ್ ಶೆಟ್ಟಿ ಇದ್ದರು.
* ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಶಯ
* ಉಡುಪಿ, ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
ಉಡುಪಿ: ಜಿಲ್ಲೆಯು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದಲ್ಲಷ್ಟೇ ಅಲ್ಲದೆ, ದೇಶಮಟ್ಟದಲ್ಲಿ ಮುಂಚೂಣಿಯಲ್ಲಿದ್ದು ಕ್ರೀಡಾ ಕ್ಷೇತ್ರದಲ್ಲಿಯೂ ಸಹ ಸಾಧನೆ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ತಾಲೂಕು ಮಟ್ಟದಿಂದ ಜಿಲ್ಲಾಮಟ್ಟ ಹಾಗೂ ವಿಭಾಗಮಟ್ಟದಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಬೇಕು. ತನ್ಮೂಲಕ ಉಡುಪಿ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕೆಂದು ಶಾಸಕ ಯಶ್ಪಾಲ್ ಸುವರ್ಣ ಆಶಯ ವ್ಯಕ್ತಪಡಿಸಿದರು.
ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಆಯೋಜಿಸಿದ್ದ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಪೂರ್ ಮಾತನಾಡಿ, ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ವಿಕಸನ ರೂಪುಗೊಳ್ಳಲು ಸಾಧ್ಯ. ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಅವುಗಳಿಗೆ ಹೆಚ್ಚಿನ ಆದ್ಯತೆ ನೀಡದೆ ಸಮಾನ ಮನಸ್ಥಿತಿಯಿಂದ ಭಾಗವಹಿಸಬೇಕು. ಕ್ರೀಡೆಯಿಂದ ಜೀವನದಲ್ಲಿ ಶಿಸ್ತು, ಆತ್ಮ ವಿಶ್ವಾಸವೃತ್ತಿಯಾಗುತ್ತದೆ ಎಂದರು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಶೆಟ್ಟಿ ಹೇರೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಇತರರು ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ ಸ್ವಾಗತಿಸಿದರು. ಉಡುಪಿ ತಾಲೂಕು ಕ್ರೀಡಾಧಿಕಾರಿ ವಸಂತ ಜೋಗಿ ಕಾರ್ಯಕ್ರಮ ನಿರೂಪಿಸಿದರು.