ಉಡುಪಿಯಲ್ಲಿ ಆಯೋಜಿಸಿದ್ದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗಾಗಿ ನೇಮಕಾತಿ ಮಾದರಿ ಪರೀಕ್ಷೆ ಹಾಗೂ ಪ್ರೇರಣಾ ಉಚಿತ ಶಿಬಿರ ಉದ್ಘಾಟಿಸಿ ಯಶ್ಪಾಲ್ ಸುವರ್ಣ ಮಾತನಾಡಿದರು. ಆಶ್ರಿತಾ ಶೆಟ್ಟಿ, ಜಗದೀಶ್, ಆದರ್ಶ ಶೆಟ್ಟಿ ಇದ್ದರು.
* ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಶಯ
* ಪೊಲೀಸ್ ನೇಮಕಾತಿ ಮಾದರಿ ಪರೀಕ್ಷಾ ಶಿಬಿರ
ಉಡುಪಿ: ದೇಶದ ಕಾರ್ಯಾಂಗ ವ್ಯವಸ್ಥೆಯಲ್ಲಿ ಐಎಎಸ್, ಐಪಿಎಸ್, ಕೆಎಎಸ್ ನಂತಹ ಸರ್ಕಾರಿ ಸೇವೆಯ ಹುದ್ದೆಗಳು ಮಹತ್ವದ ಪಾತ್ರ ವಹಿಸುತ್ತವೆ. ಇಂತಹ ಶ್ರೇಷ್ಠ ಉದ್ಯೋಗಾವಕಾಶ ಪಡೆಯಲು ಕರಾವಳಿ ಜಿಲ್ಲೆಯ ವಿದ್ಯಾರ್ಥಿಗಳು ವಿಶೇಷ ಆಸಕ್ತಿ ವಹಿಸಬೇಕು. ಸರ್ಕಾರಿ ಅಧಿಕಾರಿಗಳಾಗಿ ಜಿಲ್ಲೆಯ ಪ್ರಗತಿಗೆ ಕೊಡುಗೆ ನೀಡುವಂತಾಗಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸಲಹೆ ನೀಡಿದರು.
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗಾಗಿ ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಅಭಿನವ ಭಾರತ ಉಡುಪಿ ಹಾಗೂ ಸ್ಪರ್ಧಾ ಸಾರಥಿ ಕೆಎಎಸ್ ಅಕಾಡೆಮಿ ಕುಂದಾಪುರ ಇವರ ಸಹಕಾರದಲ್ಲಿ ಭಾನುವಾರ ಆಯೋಜಿಸಿದ್ದ ಮಾದರಿ ಪರೀಕ್ಷೆ ಹಾಗೂ ಪ್ರೇರಣಾ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಬ್ರಹ್ಮಾವರ ಪೊಲೀಸ್ ಠಾಣೆಯ ಪ್ರೊಭೆಷನರಿ ಪೊಲೀಸ್ ಉಪ ನಿರೀಕ್ಷಕಿ ಆಶ್ರಿತಾ ಶೆಟ್ಟಿ ಮಾತನಾಡಿ, ನಿರಂತರ ಪ್ರಯತ್ನ ಹಾಗೂ ಕಠಿಣ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸುಲಭವಾಗಿ ಎದುರಿಸಬಹುದು. ಅದಕ್ಕೆ ತಕ್ಕಂತೆ ಪೂರ್ವಸಿದ್ಧತೆ ಮಾಡಿಕೊಂಡಲ್ಲಿ ಸರ್ಕಾರಿ ಹುದ್ದೆಗಳಲ್ಲಿ ಆಯ್ಕೆಯಾಗಲು ವಿಪುಲ ಅವಕಾಶವಿದೆ. ಉಡುಪಿ ಜಿಲ್ಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು, ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇವೆ ಸಲ್ಲಿಸುವಂತಾಗಬೇಕು. ಆ ನಿಟ್ಟಿನಲ್ಲಿ ಈ ಶಿಬಿರ ಪೂರಕವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧಾ ಸಾರಥಿ ಸಂಸ್ಥೆಯ ಆಡಳಿತ ನಿರ್ದೇಶಕ ಆದರ್ಶ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಟ್ಟು ಯತೀಶ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರತಿವರ್ಷವೂ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಕರಾವಳಿ ಜಿಲ್ಲೆಯ ವಿದ್ಯಾರ್ಥಿಗಳೇ ಅಗ್ರಸ್ಥಾನ ಪಡೆಯುತ್ತಾರೆ. ಆದರೆ, ಸರ್ಕಾರಿ ಸೇವೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಾಧನೆ ಮಾಡುತ್ತಿಲ್ಲ. ಹೀಗಾಗಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ಹಾಗೂ ಸಹಕಾರ ನೀಡಲು ಈ ಪ್ರೇರಣಾ ಶಿಬಿರ ಆಯೋಜಿಸಲಾಗಿದೆ.
— ಯಶ್ಪಾಲ್ ಸುವರ್ಣ. ಉಡುಪಿ ಶಾಸಕ.