ಘಟನೆ ನಡೆದ ಮನೆ ಹಾಗೂ ನೇತ್ರಾವತಿ ಮತ್ತು ಸುಪ್ರತಿ 
ಉಡುಪಿ

ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ

ಕುಂದಾಪುರ: ಕುಂದಾಪುರ ತಾಲೂಕಿನ ಶಾನಾಡಿ ಕೊರಗ ಕಾಲೋನಿಯಲ್ಲಿ ತಾಯಿ ತನ್ನ ಅಂಗವಿಕಲ ಮಗಳ ಕುತ್ತಿಗೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಬಳಿಕ ಆಕೆಯೂ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಶಾನಾಡಿ ಕೊರಗ ಕಾಲನಿ ನಿವಾಸಿ ಸುಧಾಕರ ಕೊರಗ ಅವರ ಪುತ್ರಿ ಸುಪ್ರತಿ(14) ಹಾಗೂ ಪತ್ನಿ ನೇತ್ರಾವತಿ(34) ಮೃತಪಟ್ಟವರು.

ಸುಪ್ರತಿ ಹುಟ್ಟಿನಿಂದಲೇ ಅಂಗವಿಕಲೆಯಾಗಿದ್ದು, ನಡೆಯಲು, ಕುಳಿತುಕೊಳ್ಳಲು, ಮಾತನಾಡಲು ಸಾಧ್ಯವಾಗದೆ ಹಾಸಿಗೆಯಲ್ಲೇ ಇರಬೇಕಾದ ಸ್ಥಿತಿಯಲ್ಲಿದ್ದರು. ಮಗಳ ಆರೈಕೆಯನ್ನು ತಾಯಿ ನೇತ್ರಾವತಿ ಮಾಡುತ್ತಿದ್ದರು ಎನ್ನಲಾಗಿದೆ. ದಂಪತಿಗೆ ಒಂದು ವರ್ಷದ ಗಂಡು ಮಗುವಿದೆ.

ಭಾನುವಾರ ಸುಧಾಕರ ಅವರು ಕೆಲಸಕ್ಕೆ ತೆರಳಿದ ಬಳಿಕ ನೇತ್ರಾವತಿ ಮಗಳನ್ನು ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕುಂದಾಪುರ ಉಪವಿಭಾಗದ ಡಿವೈಎಸ್‌ಪಿ ಎಚ್.ಡಿ.ಕುಲಕರ್ಣಿ, ಬ್ರಹ್ಮಾವರ ವೃತ್ತನಿರೀಕ್ಷಕ ಗೋಪಿಕೃಷ್ಣ, ಕೋಟ ಪೊಲೀಸ್ ಠಾಣೆ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಹಾಗೂ ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.