: ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಕರಾವಳಿ ಭಾಗದಲ್ಲಿಯೂ ಉತ್ತಮ ಮಳೆಯಾಗುತ್ತಿರುವ ಪರಿಣಾಮ ನೇತ್ರಾವತಿ ನದಿಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಸಕ ರಾಜೇಶ್ ನಾಕ್ ತಾಲೂಕು ಆಡಳಿತಕ್ಕೆ ಸೂಚಿಸಿದ್ದಾರೆ.
ಮಳೆ ಮುಂದುವರಿದರೆ ಯಾವುದೇ ಕ್ಷಣದಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದ್ದು, ತಾಲೂಕುಮಟ್ಟದ ಎಲ್ಲ ಅಧಿಕಾರಿಗಳಿಗೆ ತಾಲೂಕು ಕೇಂದ್ರವನ್ನು ಬಿಟ್ಟು ತೆರಳದಂತೆ ಸೂಚನೆ ನೀಡಲಾಗಿದೆ. ನದಿಯ ನೀರು ಅಪಾಯದ ಮಟ್ಟ ತಲುಪಿದರೆ ನದಿ ತೀರದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಹಾಗೂ ಜನರಿಗೆ ಅಗತ್ಯ ಮುನ್ನೆಚ್ಚರಿಕೆ ನೀಡಲು ಶಾಸಕ ರಾಜೇಶ್ ನಾಕ್ ತಹಸೀಲ್ದಾರ್ ಮಂಜುನಾಥ್‌ಗೆ ನಿರ್ದೇಶನ ನೀಡಿದ್ದಾರೆ.
ಪಾಣೆಮಂಗಳೂರು-ಆಲಡ್ಕ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮವಾಗಿ 15 ಮನೆಗಳ ಸದಸ್ಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ತೆಗೆ ತಗ್ಗುಪ್ರದೇಶಗಳಾದ ಕಂಚಿಕಾರ್ ಪೇಟೆ, ಬಸ್ತಿಪಡ್ಪು, ಜಕ್ರಿಬೆಟ್ಟು, ಎಸ್.ವಿ.ಎಸ್.ಶಾಲಾ ಮೈದಾನ, ನಾವೂರ,ನಂದಾವರ ಸಹಿತ ಅನೇಕ ಕಡೆಗಳಲ್ಲಿ ನೀರು ತುಂಬಿ ಜಲಾವೃತವಾಗುವುದರಿಂದ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ತಾಲೂಕು ಆಡಳಿತವು ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸುತ್ತಿದ್ದು, ಅಗತ್ಯವಿದ್ದರೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಹಸೀಲ್ದಾರ್ ಮಂಜುನಾಥ್ ಹಾಗೂ ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ತಿಳಿಸಿದ್ದಾರೆ.
ಸಂಭಾವ್ಯ ನೆರೆ ಪರಿಸ್ಥಿತಿ ಎದುರಿಸಲು ಎಸ್‌ವಿಎಸ್ ಶಾಲೆ ಹಾಗೂ ಪಾಣೆಮಂಗಳೂರು ಶಾರದಾ ಹೈಸ್ಕೂಲ್‌ನಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ.