ಪೂಪಾಡಿಕಲ್ಲು 5 ಸೆಂಟ್ಸ್ ಕಾಲನಿ ರಸ್ತೆ ನಾದುರಸ್ತಿಯಲ್ಲಿರುವುದು. 
ಉಡುಪಿ

ಡಾಂಬರು ಕಾಣದ ಪೂಪಾಡಿಕಲ್ಲು 5 ಸೆಂಟ್ಸ್ ಕಾಲನಿ ರಸ್ತೆ

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಪಾಲಡ್ಕ ಗ್ರಾಪಂ ವ್ಯಾಪ್ತಿಯ ಪೂಪಾಡಿಕಲ್ಲು 5 ಸೆಂಟ್ಸ್ ಕಾಲನಿಯ 45 ವರ್ಷಗಳ ಹಳೆಯ ರಸ್ತೆಗೆ ಇದುವರೆಗೆ ಡಾಂಬರೀಕರಣವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದು, ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಕೆಸರುಮಯವಾಗುತ್ತಿರುವುದರಿಂದ ಶಾಲಾ ಮಕ್ಕಳು, ಮಹಿಳೆಯರು, ವೃದ್ಧರು, ಸಾರ್ವಜನಿಕರು ನಿತ್ಯ ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಗ್ರಾಪಂ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಹದಗೆಟ್ಟಿರುವುದರಿಂದ ದ್ವಿಚಕ್ರ ವಾಹನ ಸೇರಿದಂತೆ ಇತರ ವಾಹನಗಳ ಸಂಚಾರ ದುಸ್ತರವಾಗಿದೆ. ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಕೆಸರಿನಿಂದ ಆವೃತವಾಗುತ್ತಿದ್ದು, ಸಾರ್ವಜನಿಕರು ಜೀವದ ಹಂಗು ತೊರೆದು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನಿವಾಸಿಗಳು ದೂರಿದ್ದಾರೆ.
ರಸ್ತೆ ದುರಸ್ತಿ, ದಾಂಬರೀಕರಣಕ್ಕಾಗಿ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ರಸ್ತೆ ಅಭಿವೃದ್ಧಿಯ ಭರವಸೆ ನೀಡುವ ಜನಪ್ರತಿನಿಧಿಗಳು ನಂತರ ಸಾರ್ವಜನಿಕರ ಸಮಸ್ಯೆ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಪೂಪಾಡಿಕಲ್ಲು 5 ಸೆಂಟ್ಸ್ ಕಾಲನಿ ರಸ್ತೆ, ಗ್ರಾಪಂ ತ್ಯಾಜ್ಯ ವಿಲೇವಾರಿ ಘಟಕದ ಸಂಪರ್ಕ ರಸ್ತೆಯನ್ನು ತುರ್ತು ಆದ್ಯತೆ ಮೇರೆಗೆ ಅಭಿವೃದ್ಧಿಪಡಿಸಿ ದಾಂಬರೀಕರಣಗೊಳಿಸುವ ಮೂಲಕ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.